Tuesday, 19th November 2024

Indira Gandhi Birth Anniversary: ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲು ನಮ್ಮ ತಕರಾರಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

Indira Gandhi Birthday Anniversary

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನವನ್ನು (Indira Gandhi Birth Anniversary) ಇಡೀ ದೇಶದಲ್ಲಿ ಆಚರಿಸಿ ಅವರು ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ಸ್ಮರಿಸುತ್ತಿದ್ದೇವೆ. ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಅವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು ಕೆಚ್ಚೆದೆಯಿಂದ ದೇಶವನ್ನು ಆಳಿದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ. ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು ಎಂದು ತಿಳಿಸಿದರು.

ಬ್ಯಾಂಕುಗಳ ರಾಷ್ಟ್ರೀಕರಣದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು

ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಕಾಂಗ್ರೆಸ್ ಪಕ್ಷ ಮಾತ್ರ ಸಮಾಜದಲ್ಲಿ ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವ, ಸಂವಿಧಾನ, ಪ್ರಜಾಪ್ರಭುತ್ವಗಳಲ್ಲಿ ಅಪಾರವಾದ ನಂಬಿಕೆ ಇಟ್ಟು ಅದರಂತೆ ನಡೆಯುವ ಪಕ್ಷ ಎಂದರು.

ಈ ಸುದ್ದಿಯನ್ನೂ ಓದಿ | Delhi Air Pollution: ರಾಷ್ಟ್ರ ರಾಜಧಾನಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ; ರೈಲು, ವಿಮಾನಗಳ ಸಂಚಾರದಲ್ಲಿ ವಿಳಂಬ, ಮಕ್ಕಳಿಗೆ ಆನ್‌ಲೈನ್‌ ಪಾಠ

ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ

ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಅಧಿಕಾರವನ್ನು ಮಹಿಳೆಯರಿಗೆ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದ ಇತಿಹಾಸವನ್ನು ನೆನಪಿಸಿ ಬಿಜೆಪಿ ಹೇಗೆ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ ಎನ್ನುವುದನ್ನು ವಿವರಿಸಿ, ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು ಎಂದು ಸಿಎಂ ಪ್ರಶ್ನಿಸಿದರು.

ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರು ಪ್ರಾಣ ತ್ಯಾಗ ಮಾಡಿಲ್ಲ

ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದರು. ಕರ್ನಾಟಕದಲ್ಲಿ 2013 ರಲ್ಲಿ ಒಂದು ರೂಪಾಯಿಗೆ, ನಂತರ ಉಚಿತವಾಗಿ ಅಕ್ಕಿಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ವಾಜಪೇಯಿಯವರಾಗಲಿ, ಯಡಿಯೂರಪ್ಪ ಅವರಾಗಲಿ ಇಂಥದ್ದನ್ನು ಮಾಡಿದ್ದಾರೆಯೇ? ನಾವು ಬಡವರ ಪರವಾಗಿದ್ದೇವೆ. ಬಿಜೆಪಿ ಬಡವರ ಪರವಾಗಿ ಇರಲು ಸಾಧ್ಯವೇ ಇಲ್ಲ ಎಂದು ದೂರಿದರು.

ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವದ ಪರವಾಗಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವುದು, ಸಂವಿಧಾನದ ಬಗ್ಗೆ ಗೌರವ ಇಟ್ಟು ಅದರಂತೆ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಈ ದೇಶದ ಐಕ್ಯತೆಗೆ, ಸಾರ್ವಭೌಮತೆಗೆ ಪ್ರಾಣ ಕೊಟ್ಟವರು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರು ಯಾರಾದರೂ ಪ್ರಾಣ ತ್ಯಾಗ ಮಾಡಿದ್ದಾರೆಯೇ? ಎಂದು ಸಿಎಂ ಅವರು ಪ್ರಶ್ನಿಸಿದರು.

ದೇಶಭಕ್ತಿ ಉಳಿದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ

ಬಿಜೆಪಿ ದೇಶ ಭಕ್ತಿ ಬಗ್ಗೆ ಉದ್ದನೆಯ ಭಾಷಣ ಮಾಡುತ್ತಾರೆ ಅಷ್ಟೇ. ದೇಶಭಕ್ತಿ ಉಳಿದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದರು. ಇದರ ಆಧಾರದ ಮೇಲೆ ಈ ದೇಶವನ್ನು, ನಾಡನ್ನು ಕಟ್ಟಬೇಕಾಗುತ್ತದೆ. ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡು ಅವರಿಂದ ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿಯವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದರು. ಸಂಸತ್ತು, ವಿಧಾನ ಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದರು.

ಕಾಂಗ್ರೆಸ್ ಬಿಜೆಪಿಯಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ

ಕಾಂಗ್ರೆಸ್ ಪಕ್ಷ ಈ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಅವರು ಯಾವತ್ತೂ ಶ್ರೀಮಂತರ, ಮೇಲ್ಜಾತಿಯವರ ಪರ. 1925 ರಲ್ಲಿ ಆರ್.ಎಸ್.ಎಸ್ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೆ ಪ್ರಜಾಪ್ರಭುತ್ವ, ಮೀಸಲಾತಿ, ಸಂವಿಧಾನದ ಪರವಾಗಿ ಮಾತನಾಡಿಲ್ಲ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Job News: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ 164 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಕಾರ್ಯಕರ್ತರು ಉಪಸ್ಥಿತರಿದ್ದರು.