Saturday, 26th October 2024

Karnataka Rain: ಭಾರಿ ಮಳೆ; ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ (Karnataka Rain) ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು. ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು. ಈ ಬಾರಿ ಜಲವಿದ್ಯುತ್‌ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಹಿಂಗಾರು ಅವಧಿಯಲ್ಲಿ 25 ಸಾವು

ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು 6.84 ಲಕ್ಷ ರೂ., ಸಣ್ಣ ಜಾನುವಾರುಗಳಿಗೆ ಒಟ್ಟು 2.8 ಲಕ್ಷ ರೂ. ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ ಎಂದು ತಿಳಿಸಿದರು.

ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077 ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ 50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ.

ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ  ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ಸೂಚಿಸಿದರು.

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 551.25 ಕೋಟಿ ರೂ. ಹಾಗೂ ತಹಸೀಲ್ದಾರ್‌ ಅವರ ಖಾತೆಯಲ್ಲಿ 115.71 ಕೋಟಿ ರೂ. ಸೇರಿ ಒಟ್ಟು 666.96 ಕೋಟಿ ರೂ. ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಲು ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು. ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಈ ಸುದ್ದಿಯನ್ನೂ ಓದಿ | DMK MP Abdulla :ನನಗೆ ಹಿಂದಿ ಅರ್ಥ ಆಗೋದಿಲ್ಲ… ಕೇಂದ್ರ ಸಚಿವರ ಪತ್ರಕ್ಕೆ ತಮಿಳಿನಲ್ಲೇ ಉತ್ತರ ಬರೆದ DMK ಸಂಸದ

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.