ಬೆಂಗಳೂರು: ರಾಜ್ಯದಲ್ಲಿ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು-ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ (Karnataka Rain) ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 13 ರಿಂದ 15 ರವರೆಗೆ ಹಾಗೂ ನವೆಂಬರ್ 14 ರಂದು ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪಶ್ಚಿಮದ ಕಡೆಗೆ ಚಲಿಸಿದ್ದು, ಸದ್ಯ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿದೆ. ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ಎತ್ತರದೊಂದಿಗೆ ನೈಋತ್ಯದ ಕಡೆಗೆ ವಾಲುತ್ತಿದ್ದು,
ಇದರ ಪ್ರಭಾವದಿಂದ, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ನವೆಂಬರ್ 13 ರಿಂದ 17 ರವರೆಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.15 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಹಾಗೂ ನವೆಂಬರ್ 14 ರಂದು ಗುಡುಗು-ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ನ.14ರಂದು ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ನ.15ರಂದು ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ ನ.16ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಇನ್ನು ನ. 17ರಂದು ಉಡುಪಿ, ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಮತ್ತು ಚಿಕ್ಕಮಗಳೂರು, ಹಾಸನ, ತುಮಕೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಉಳಿದ ಭಾಗಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Goods Train Derailment: ಹಳಿ ತಪ್ಪಿದ ಗೂಡ್ಸ್ ರೈಲು; ಹಲವು ರೈಲು ಸಂಚಾರ ರದ್ದು, ಮಾರ್ಗ ಬದಲಾವಣೆ
ನ. 18ರಂದು ಕರಾವಳಿ ಮತ್ತು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ.15ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹೆಚ್ಚಿನ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 21 ° C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 21 °C ಆಗಿರಬಹುದು.