Saturday, 26th October 2024

Karnataka Rain: ಬೆಂಗಳೂರಲ್ಲಿ ಅಕ್ರಮ ನಿರ್ಮಾಣ ತಡೆಗೆ ಕಠಿಣ ಕಾನೂನು ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಧಾನಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 9 ಮಂದಿ ಮೃತಪಟ್ಟ ಪ್ರಕರಣವನ್ನು (Karnataka Rain) ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಗರದಲ್ಲಿ ಅಕ್ರಮ ನಿರ್ಮಾಣ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಅಕ್ರಮ ಕಟ್ಟಡಗಳ ನಿರ್ಮಾಣ ತಡೆಗೆ ಹೊಸ ಕಠಿಣ ಕಾನೂನು ತಂದು ಬಿಬಿಎಂಪಿ, ಬಿಡಿಎ, ಬಿಎಂಆರ್‌ಡಿಎಗೆ ಹೆಚ್ಚು ಅಧಿಕಾರ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂಗಾರು ಅವಧಿಯಲ್ಲಿ ಭಾರಿ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅವರು, ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.

ಮುಂಗಾರು ಅವಧಿಯಲ್ಲಿ ಅಂದರೆ ಜೂನ್‌ 1ರಿಂದ ಸೆಪ್ಟಂಬರ್‌ 30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ 978 ಮಿ.ಮೀ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲೂ ಶೇ.15ರಷ್ಟು ಹೆಚ್ಚುವರಿ ಮಳೆಯಾಗಿತ್ತು. ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ ಎಂದು ಹೇಳಿದರು.

ಅತಿವೃಷ್ಟಿಯಿಂದ 25 ಸಾವು, 84 ಮನೆಗಳಿಗೆ ಹಾನಿ

ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು. ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077 ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್‌ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ. ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4 ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 551.25 ಕೋಟಿ ರೂ. ಹಾಗೂ ತಹಸೀಲ್ದಾರ್‌ ಅವರ ಖಾತೆಯಲ್ಲಿ 115.71 ಕೋಟಿ ರೂ. ಸೇರಿ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದೆ. ಮುಂಗಾರಿನಲ್ಲಿ 80 ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಬೆಳೆ ಪರಿಹಾರ ನೀಡಲಾಗುತ್ತಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ 63,647 ಕೆರೆ, ಕಲ್ಯಾಣಿಗಳ ಅಭಿವೃದ್ಧಿ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ. ಅತಿವೃಷ್ಟಿಯಿಂದಾಗಿ 12,553 ಕಿ.ಮೀ. ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ 1106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ ಉಂಟಾಗಿರುವ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು.

ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಈ ವರ್ಷ ಅಕ್ಟೋಬರ್‌ ತಿಂಗಳಲ್ಲಿ 275 ಮಿಮೀ ಮಳೆಯಾಗಿದ್ದು, ಇದು 3ನೇ ಅತಿ ಹೆಚ್ಚು ಮಳೆಯಾಗಿದೆ. 2005ರಲ್ಲಿ ಈ ಅವಧಿಯಲ್ಲಿ 407 ಮೀಮೀ ಮಳೆಯಾಗಿತ್ತು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ರಾಜಕಾಲುವೆ ಒತ್ತುವರಿ ತೆರವು, ತಡೆಗೋಡೆ ನಿರ್ಮಾಣ ಕುರಿತು ಆದೇಶ ನೀಡಿದ್ದೆ. ಆದರೆ ಈ ಕಾರ್ಯ ಇನ್ನೂ ಪೂರ್ಣಗೊಳಿಸದ ಕಾರಣ ಪ್ರತಿ ವರ್ಷ ಮಳೆ ಬಂದ ತಕ್ಷಣ ಅನಾಹುತಗಳು ಸಂಭವಿಸುತ್ತಿವೆ. ರಾಜಕಾಲುವೆಗಳ ಅತಿಕ್ರಮಣ ತೆರವು ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ತಿಳಿಸಿದರು.

ವಿಶ್ವಬ್ಯಾಂಕ್‌ ಸಂಸ್ಥೆಯು ಬೆಂಗಳೂರು ನಗರದಲ್ಲಿ ಬಾಕಿ ಉಳಿದಿರುವ 173 ಕಿಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸುವ ಯೋಜನೆಗೆ ಹಾಗೂ 80 ಕಿಮೀ ಉದ್ದದ ಕಲ್ಲುಕಟ್ಟಡದ ರಾಜಕಾಲುವೆಗಳ ಸಬಲೀಕರಣ ಯೋಜನೆಗೆ ರೂ.2ಸಾವಿರ ಕೋಟಿ ಆರ್ಥಿಕ ನೆರವು ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ. ಈ ಯೋಜನೆಯ ವಿಸ್ತೃತ ಯೋಜನಾ ವರದಿಯ ಅಂದಾಜು ಪಟ್ಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಟೆಂಡರ್‌ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಮುಂದಿನ ವರ್ಷದ ಆರಂಭದ ಒಳಗಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರ ವತಿಯಿಂದ ರಾಜಕಾಲುವೆಗಳ ಕಿರು ಸೇತುವೆಗಳ ಅಗಲೀಕರಣ ಮತ್ತು ಕೆರೆಗಳ ಅಭಿವೃದ್ಧಿಗಾಗಿ ರೂ.275ಕೋಟಿ ಕ್ರಿಯಾ ಯೋಜನೆ ಅನುಮೋದಿಸಲಾಗಿದೆ.

ಕೆರೆಗಳಿಗೆ ರೂ.50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ರೂ. 669 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೆಂಗಳೂರು ನಗರದಲ್ಲಿ ಬಾಕಿ ಇರುವ 173 km ರಾಜಕಾಲುವೆ ನಿರ್ಮಾಣ ಮಾಡಲು 2000 ಕೋಟಿ ಹಣ ಆರ್ಥಿಕ ನೆರವು ನೀಡಲು ವಿಶ್ವಸಂಸ್ಥೆ ಒಪ್ಪಿಕೊಂಡಿದೆ. 3-4 ತಿಂಗಳಲ್ಲಿ ಇದು ಫೈನಲ್ ಆಗ್ತದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಈ ಯೋಜನಾ ವರದಿಗೆ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Maharashtra Election 2024 : ಮಹಾರಾಷ್ಟ್ರ ಚುನಾವಣೆಗೆ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆ

NDMF ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ 175 ಕೋಟಿ ಕೆರೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲು ಸೂಚನೆ ನೀಡಲಾಗಿದೆ. ತೂಬು ಕಾಲುವೆಗೆ 85 ಕೋಟಿ, ಬೆಂಗಳೂರು ನಗರ ರಸ್ತೆ ನಿರ್ಮಾಣಕ್ಕಾಗಿ 165 ಕೋಟಿ ಪ್ರಸ್ತಾವನೆ ಸಿದ್ದಪಡಿಸಲಾಗಿದೆ. ಈಗ 14 ಸಾವಿರ ಗುಂಡಿ ಮುಚ್ಚಿದ್ದೀವಿ. ಮುಚ್ಚಿದ ಬಳಿಕ ಮತ್ತಷ್ಟು ಮಳೆ ಬಂದಿದ್ದರಿಂದ ಮತ್ತೆ ಗುಂಡಿ ಮುಚ್ಚಿವೆ. ಇವನ್ನೂ ಮುಚ್ಚಲು ಸೂಚನೆ ನೀಡಲಾಗಿದೆ. ಬೆಂಗಳೂರಿಗೆ ಬಂದಿದ್ದ ವಿಶ್ವ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. 5000 ಕೋಟಿ ನೆರವು ನೀಡಲು ಒಪ್ಪಿದ್ದಾರೆ. ಇದರಲ್ಲಿ 3500 ಕೋಟಿ ಬೆಂಗಳೂರಿಗೆ ಖರ್ಚು ಮಾಡಲಾಗುವುದು ಎಂದು ಮಾಹಿತಿ ನೀಡಿದರು.