ಬೆಂಗಳೂರು: ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಹಿಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಶನಿವಾರ ರಾತ್ರಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗಿದೆ. ಅದೇ ರೀತಿ ನವೆಂಬರ್ 4ರಂದು ಸೋಮವಾರ ಕೂಡ ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನ.5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನವಿರಲಿದೆ. ನ. 6ರಂದು ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.
ಅದೇ ರೀತಿ ನ.7ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನ.9ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Elephant Attack: ಶಿವಮೊಗ್ಗದ ಗುಡ್ಡದ ಅರಕೆರೆಯಲ್ಲಿ ಕಾಡಾನೆಗಳ ಹಾವಳಿ; 1200 ಬಾಳೆ, 200 ಅಡಿಕೆ ಗಿಡ ನಾಶ
ನ.5ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ° C ಮತ್ತು 20 ° C ಆಗಿರಬಹುದು.