Monday, 16th September 2024

KAS Exam: ಕೆಎಎಸ್‌ ಮರು ಪರೀಕ್ಷೆಗೆ ಸಿಎಂ ಆದೇಶ; 2 ತಿಂಗಳೊಳಗೆ ನಡೆಸಲು ಕೆಪಿಎಸ್‌ಸಿಗೆ ಸೂಚನೆ

KAS Exam

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕೆಎಎಸ್‌ ಪೂರ್ವಭಾವಿ ಪರೀಕ್ಷೆಯಲ್ಲಿ (KAS Exam) ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದರು. ಹೀಗಾಗಿ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳ ಒಳಗೆ ಮರುಪರೀಕ್ಷೆ ನಡೆಸಲು ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

https://x.com/CMofKarnataka/status/1830507065242182002

ಆ.27ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಮುಂದೂಡಬೇಕು ಎಂಬ ಅಭ್ಯರ್ಥಿಗಳ ವಿರೋಧದ ನಡುವೆ ಪರೀಕ್ಷೆ ನಡೆಸಲಾಗಿತ್ತು. ಆದರೂ, ಹಲವು ಬಾರಿ ಪರೀಕ್ಷೆ ಮುಂದೂಡಿಕೆಯಾಗಿದ್ದರಿಂದ ಕೆಪಿಎಸ್‌ಸಿ, ಆ.27ರಂದೇ ಪರೀಕ್ಷೆ ನಡೆಸಿತ್ತು. ಆದರೆ, ಪರೀಕ್ಷೆ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡ ಭಾಷಾಂತರದಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ತೀವ್ರ ಅಸಮಾಧಾನ ಹೊರಹಾಕಿದ್ದರು.

ಇನ್ನು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ ಕೆಪಿಎಸ್‌ಸಿ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ಹೊರಹಾಕಿತ್ತು. ಪ್ರಶ್ನೆಗಳ ಭಾಷಾಂತರ ಕಬ್ಬಿಣದ ಕಡಲೆಯಾಗಿದ್ದು, ಉದ್ದುದ್ದ ಪ್ರಶ್ನೆಗಳನ್ನು ಕೇಳಿದ್ದು, ಪ್ರಶ್ನೆಗಳ ಅಸ್ಪಷ್ಟತೆ ಕೆಪಿಎಸ್ಸಿ ಪರೀಕ್ಷೆಯ ಗುಣಮಟ್ಟ ಕುಸಿಯುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂಬ ಭಾವನೆಯನ್ನು ಸಾರ್ವಜನಿಕರಲ್ಲಿ ಮೂಡಿಸಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಮತ್ತು ಆಡಳಿತ ಭಾಷೆಯಾಗಿದೆ. ಆದರೆ ಇಂಗ್ಲಿಷ್ ಭಾಷೆಯಲ್ಲಿ ಪ್ರಕಟವಾದ ಪ್ರಶ್ನೆಗಳನ್ನು ಓದಿ ಅರ್ಥೈಸಿಕೊಂಡು ಅಭ್ಯರ್ಥಿಗಳು ಉತ್ತರ ಬರೆಯುವಂತೆ ಸೂಚಿಸಿರುವುದನ್ನು ಪ್ರಾಧಿಕಾರ ಖಂಡಿಸುತ್ತದೆ. ಆಡಳಿತ ಭಾಷೆಯಾದ ಕನ್ನಡಕ್ಕೆ ಪ್ರಾಧಾನ್ಯತೆ ನೀಡದೆ ಮತ್ತು ಅಭ್ಯರ್ಥಿಗಳಿಗೆ ಅನಾನುಕೂಲತೆಯನ್ನು ಉಂಟು ಮಾಡಿರುವ ಕೆಪಿಎಸ್ಸಿ ನಡೆಯನ್ನು ಪ್ರಾಧಿಕಾರ ವಿರೋಧಿಸುತ್ತದೆ. ಪರೀಕ್ಷೆಯಲ್ಲಿ ಉಂಟಾದ ಪ್ರಮಾದ ಹಾಗೂ ಇದಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಕೈಗೊಂಡ ಕ್ರಮದ ಸಂಪೂರ್ಣ ವರದಿಯನ್ನು ಮೂರು ದಿನದೊಳಗಾಗಿ ಪ್ರಾಧಿಕಾರಕ್ಕೆ ಕಳುಹಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕೆಪಿಎಸ್‌ಸಿಗೆ ಸೂಚನೆ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೆಎಎಸ್‌ ಅಭ್ಯರ್ಥಿಗಳ ಮನವಿ ಆಲಿಸಿದ್ದ ಸಿಎಂ ಅವರು, ಮರು ಪರೀಕ್ಷೆ ನಡೆಸಲು ಸೂಚನೆ ನೀಡಿದ್ದಾರೆ.

 

Leave a Reply

Your email address will not be published. Required fields are marked *