Thursday, 19th September 2024

Mandya Violence: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಉದ್ದೇಶ ಪೂರ್ವಕವಾಗಿಯೇ ಅನ್ಯ ಕೋಮಿನ ಪುಂಡರಿಂದ ದಾಂಧಲೆ; ಎಚ್‌ಡಿಕೆ ವಾಗ್ದಾಳಿ

Mandya Violence

ನವದೆಹಲಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿ ವೇಳೆ ಅನ್ಯ ಕೋಮಿನ ಪುಂಡರು ನಡೆಸಿದ ದಾಳಿಯನ್ನು (Mandya Violence) ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H. D. Kumaraswamy) ಖಂಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದೂ ಅವರು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಉಗ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

ʼʼಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿಯಾಗಿಸಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿʼʼ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.

ಮುಂದುವರಿದು, ʼʼಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆʼʼ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಸ್ವಾರ್ಥ

ʼʼಕಾಂಗ್ರೆಸ್ ಮತ್ತು ಆ ಪಕ್ಷದ ರಾಜ್ಯ ಸರ್ಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ಗೆ ಕೆಟ್ಟ ದಿನಗಳು ದೂರವಿಲ್ಲʼʼ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಶಾಂತಿ ಕಾಪಾಡಿ

ʼʼಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲʼʼ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಾಗಮಂಗಲ ಉದ್ವಿಗ್ನ

ಮಂಡ್ಯದಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಪೆಟ್ರೋಲ್‌ ಬಾಂಬ್‌ ಎಸೆದು ದಾಂಧಲೆ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗಮಂಗಲ(Nagamangala)ದ ಬದರಿಕೊಪ್ಪಲಿನಲ್ಲಿ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ನಾಗಮಂಗಲದ ಮೈಸೂರು ರಸ್ತೆ(Mysore road)ಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆಯಿತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ: Mandya Violence: ಗಣೇಶೋತ್ಸವ ಮೆರವಣಿಗೆ ವೇಳೆ ಭಾರೀ ಕಲ್ಲು ತೂರಾಟ; ಪೆಟ್ರೋಲ್‌ ಬಾಂಬ್‌ ಎಸೆದು ಅನ್ಯಕೋಮಿನ ಯುವಕರ ದಾಂಧಲೆ