Saturday, 28th December 2024

Manmohan Singh: ಮನಮೋಹನ್ ಸಿಂಗ್ ಸ್ಮರಣಾರ್ಥ ಆರ್ಥಿಕ ಸಂಶೋಧನಾ ಮತ್ತು ಅಧ್ಯಯನ ಕೇಂದ್ರ ಸ್ಥಾಪನೆ: ಡಿಕೆಶಿ

Manmohan Singh

ಬೆಂಗಳೂರು: ಹಣೆಬರಹ ನಮ್ಮ ಕೈಯಲ್ಲಿಲ್ಲ. ಮನಮೋಹನ್ ಸಿಂಗ್ (Manmohan Singh) ಅವರು ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರ ಕಾರ್ಯಕ್ರಮಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಆರ್ಥಿಕ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬೆಳವಣಿಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಮಾಡಿದ ಸುಧಾರಣೆಗಳ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಕಲಿಯಲು ನೆರವಾಗುವಂತೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನೆ ಮತ್ತು ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರು ನಿಧನ ಹೊಂದಿಲ್ಲ. ಅವರ ಕೆಲಸಗಳ ಮೂಲಕ ಎಂದಿಗೂ ನಮ್ಮ ನಡುವೆ ಜೀವಂತವಾಗಿದ್ದಾರೆ. ಜನಸಾಮಾನ್ಯನಿಗೆ ಆಹಾರದ ಹಕ್ಕನ್ನು ಸಂವಿಧಾನಾತ್ಮಕವಾಗಿ ನೀಡಿದವರು. ಆಧಾರ್ ಯೋಜನೆ, ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಶಾ ಕಾರ್ಯಕರ್ತರ ಯೋಜನೆ, ನರೇಗಾ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ರೈತರಿಗೆ ಸಂಕಷ್ಟದ ಹೊತ್ತಿದಲ್ಲಿ ಪರಿಹಾರ ಪ್ಯಾಕೇಜ್ ನೀಡುವ ಮೂಲಕ ಅವರ ಬೆನ್ನಿಗೆ ನಿಂತ ಶಕ್ತಿ ಮನಮೋಹನ್ ಸಿಂಗ್ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾವೆಲ್ಲರೂ ಗಾಂಧಿ ಭಾರತ ಕಾರ್ಯಕ್ರಮ ಮಾಡಲು ಸಜ್ಜಾಗಿದ್ದೆವು ಆದರೆ, ಇದೇ ಚಪ್ಪರದ ಅಡಿಯಲ್ಲಿ ಆರ್ಥಿಕತೆಯ ಗಾಂಧಿ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯನ್ನು ನಡೆಸುತ್ತಿದ್ದೇವೆ. ಇದನ್ನೇ ವಿಧಿಯಾಟ ಎಂದು ಕರೆಯಲಾಗುತ್ತದೆ. ಇದು ಅತ್ಯಂತ ದುಃಖದ ಸಂಗತಿ.

ಗುರುವಾರದ ಗಾಂಧಿ ಭಾರತ ಕಾರ್ಯಕ್ರಮದ ನಂತರ ಊಟದ ವೇಳೆ ರಾತ್ರಿ 9:50 ರ ಹೊತ್ತಿಗೆ ಅವರ ನಿಧನದ ಸುದ್ದಿ ತಿಳಿಯಿತು. ಮುಂದಿನ ಕಾರ್ಯಕ್ರಮಗಳನ್ನು ರದ್ದು ಮಾಡಿ ಎಂದು ಉನ್ನತ ವರಿಷ್ಠರು ತಿಳಿಸಿದರು ಎಂದು ಡಿಸಿಎಂ, ಸಭೆ ರದ್ದಾದ ಬಗ್ಗೆ ಡಿಸಿಎಂ ವಿವರಣೆ ನೀಡಿದರು.

ಈ ಸುದ್ದಿಯನ್ನೂ ಓದಿ | Manmohan Singh: ಮನಮೋಹನ್‌ ಸಿಂಗ್‌ BMW ಇಷ್ಟಪಟ್ಟವರಲ್ಲ-ಮಾರುತಿ 800 ಅವರ ಆಲ್‌ಟೈಮ್‌ ಫೇವರಿಟ್‌ ಕಾರು!

ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶ ರದ್ದು

ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

“ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

“ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು” ಎಂದು ತಿಳಿಸಿದರು.

ಕರ್ನಾಟಕದ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh Passes away) ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ತಿಳಿಸಿವೆ.

ಬೆಂಗಳೂರು ವಿಶ್ವವಿದ್ಯಾಲಯದ (Bangalore University) ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ಮಾಹಿತಿ ನೀಡಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಸಚಿವ ಎನ್.ನಾಗರಾಜ್ ಮಾಹಿತಿ ನೀಡಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ‌ Non – NEP ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಪಿ.ಧರಣಿಕುಮಾರ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ, ಕಾಲೇಜುಗಳು ರಜೆ ಇರಲಿದೆ. ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.