Friday, 22nd November 2024

ಮಂತ್ರಾಲಯದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಲಿಂಬಾವಳಿ

ಮಂತ್ರಾಲಯ: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ಮಠದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಅವರು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ, ದರ್ಶನ ಪಡೆದ ಸಂದರ್ಭದಲ್ಲಿ ಮಠದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಈ ಸಮಯದಲ್ಲಿ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಸ್ವಾಮೀಜಿ ಅವರು ಈ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿ ಸಮಿತಿ ಸದಸ್ಯರಾಗಿ 2009ರಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದು ಶ್ರೀಮಠದ ಕೆಲಸಗಳಲ್ಲಿ ಸಕ್ರಿಯವಾಗಿದ್ದಾರೆ.

ಹಾಗಾಗಿ ಅವರು ಇಂದು ಮಂತ್ರಾಲಯದ ಅಭಿವೃದ್ಧಿ ಕಾರ್ಯಗಳ ಪರಿವೀಕ್ಷಣೆ ನಡೆಸಿದರು. ನಾನಾ ಹಂತಗಳಲ್ಲಿ ಈ ಕಾಮಗಾರಿ  ಗಳು ನಡೆಯುತ್ತಿದ್ದು ಹಲವು ಸಮಸ್ಯೆಗಳು ಮತ್ತು ಅಡಚಣೆಗಳಿಂದಾಗಿ ಕೆಲಸ ನಿಧಾನವಾಗುತ್ತಿದೆ ಎಂದು ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವರು ತಾವು ಈ ಬಗ್ಗೆ ಕೂಡಲೇ ಕ್ರಮ ವಹಿಸಿ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಲು ಅಗತ್ಯ ವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ನಾಡಿದ್ದು ಮಂತ್ರಾಲಯದಲ್ಲಿ ಉದ್ಘಾಟನೆ ಆಗಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದು ಅಲ್ಲಿನ ಕಾಮಗಾರಿಗಳ ಪರಿಶೀಲನೆ ಸಹ ನಡೆಸಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದರು.