Saturday, 11th January 2025

Muda Case: ಮುಡಾ ಹಗರಣ; ಸಿಎಂ ಮೇಲ್ಮನವಿ ವಿಚಾರಣೆ ಜ.25ಕ್ಕೆ ಮಂದೂಡಿಕೆ, ದೂರುದಾರರಿಗೆ ಹೈಕೋರ್ಟ್‌ ನೋಟಿಸ್‌

MUDA Scam

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ (Muda Case) ಸಂಬಂಧ ಏಕ‌ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿದೆ.

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್​​ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿತು.

ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಸಿಂಫ್ಟಿ ವಾದ ಮಂಡನೆ ಮಾಡಿ, ಏಕಸದಸ್ಯ ಪೀಠದ ಆದೇಶದಲ್ಲಿ ಸಾಕಷ್ಟು ಲೋಪಗಳಿವೆ. 17 ಎ ನಿಯಮವನ್ನು ಸಂಪೂರ್ಣವಾಗಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಪೊಲೀಸ್ ಅಧಿಕಾರಿಮೂಲಕವೇ ಅನುಮತಿ ಕೋರಬೇಕು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಇದನ್ನು ನಿರ್ಲಕ್ಷಿಸಿದೆ. ಸಿಬಿಐ ತನಿಖೆ ಕೋರಿರುವ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಹೇಳಿದರು.

ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ವಾದ ಮಂಡಿಸಿ, ನಮ್ಮ ಕಕ್ಷಿದಾರರಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ವಿಚಾರಣೆಗೊಳಪಡಬೇಕಾಗಿದೆ. ಹೀಗಾಗಿ ಮೇಲ್ಮನವಿ ಪ್ರಶ್ನಿಸಿದ್ದೇವೆ. ರಾಜ್ಯಪಾಲರ ಅನುಮತಿ ಸರಿಯೋ ತಪ್ಪೋ ಎಂದಷ್ಟೇ ಹೇಳಬೇಕಿತ್ತು, ಆದರೆ ಹೈಕೋರ್ಟ್ ಏಕಸದಸ್ಯ ಪೀಠ ದೇವರಾಜು ವಿರುದ್ಧ ಆದೇಶ ನೀಡಿದೆ. ದೇವರಾಜು ವಾದ ಅಲಿಸದೇ ಆದೇಶ ಹೈಕೋರ್ಟ್ ಆದೇಶ ನೀಡಿದೆ ಇದು ಒಪ್ಪುವಂತದಲ್ಲ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿ, ಮೇಲ್ಮನವಿದಾರರು ಪರಸ್ಪರ ಶಾಮೀಲಾಗಿ ವಾದ ಮಂಡಿಸುತ್ತಿದ್ದಾರೆ. ಮೇಲ್ನೋಟಕ್ಕೆ ಮಾತ್ರ ಪರಸ್ಪರ ಸಂಬಂಧವಿಲ್ಲವೆಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ವಾದ ಆಲಿಸಿದ ಕೋರ್ಟ್‌, ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್‌ನ ಏಕಸದಸ್ಯ ಪೀಠವು ರಾಜ್ಯಪಾಲರ ಅನುಮತಿ ಎತ್ತಿ ಹಿಡಿಯುತ್ತಿದ್ದಂತೆ ವಿಶೇಷ ಸತ್ರ ನ್ಯಾಯಾಲಯವು, ತನಿಖೆ ನಡೆಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಅಲ್ಲದೇ, ಡಿಸೆಂಬರ್‌ 24ರ ಒಳಗೆ ತನಿಖಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು.

ಈ ಸುದ್ದಿಯನ್ನೂ ಓದಿ | Koratagere News: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್; 15 ಕೇಸ್‌ಗಳ ಆರೋಪಿ, ಹಿಂದೂ ಕಾರ್ಯಕರ್ತ ಉತ್ತರಾಖಂಡ್‌ನಲ್ಲಿ ಅರೆಸ್ಟ್