Friday, 27th September 2024

Muda Case: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಲೋಕಾಯುಕ್ತ

Muda Case

ಮೈಸೂರು: ಮುಡಾ ಹಗರಣದಲ್ಲಿ (Muda Case) ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಇತರರ ವಿರುದ್ಧ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಎಸ್‌ಪಿಗೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣದಲ್ಲಿ ಎ1 ಆಗಿ ಸಿದ್ದರಾಮಯ್ಯ, ಎ2 ಪತ್ನಿ ಪಾರ್ವತಿ, ಎ3 ಸಿದ್ಧರಾಮಯ್ಯ ಬಾಮೈದ ಮಲ್ಲಿಕಾರ್ಜನ ಸ್ವಾಮಿ, ಎ4 ಭೂ ಮಾಲೀಕ ದೇವರಾಜು ಹಾಗೂ ಎ5 ಆರೋಪಿಯಾಗಿ ಇತರರು ಎಂದು ಉಲ್ಲೇಖಿಸಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011, ಸೆಕ್ಷನ್ 120 ಬಿ, 166, 403, 406, 420, 426, 465, 468, 340, 351 ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | CM Siddaramaiah: ತಪ್ಪು ಮಾಹಿತಿ ಕೊಟ್ಟ ತೋಟಗಾರಿಕಾ ಇಲಾಖೆ ಅಧಿಕಾರಿಗೆ ಸಿಎಂ ಕ್ಲಾಸ್

ತನಿಖೆಗೆ ಆದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಮುಡಾ ಹಗರಣದಲ್ಲಿ (Muda Case) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಸಿಎಂ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಸೆ.25ರಂದು ಪ್ರಕಟವಾಗಿತ್ತು. ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿ ಕೋರ್ಟ್‌ ತೀರ್ಪು ನೀಡಿ, ತನಿಖೆಯ ಹೊಣೆಯನ್ನು ಮೈಸೂರು ಲೋಕಾಯುಕ್ತಕ್ಕೆ ವಹಿಸಿತ್ತು.

ಮೂರು ತಿಂಗಳಲ್ಲಿ (ಡಿ.24ರೊಳಗೆ) ತನಿಖೆ ನಡೆಸಿ ವರದಿ ನೀಡಲು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್‌ ನಿರ್ದೇಶನ ನೀಡಿತ್ತು. ಸಿಆರ್‌ಪಿಸಿ ಸೆ.156(3) ಅಡಿ ತನಿಖೆಗೆ ಆದೇಶ ನೀಡಲಾಗಿತ್ತು. ಅಧಿಕಾರ ದುರ್ಬಳಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ 82ನೇ ಸಿಸಿಎಚ್‌ ಜನಪ್ರತಿನಿಧಿಗಳ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ನಡೆಸಿ ತೀರ್ಪು ನೀಡಿದ್ದರು.