Thursday, 12th December 2024

Muda Scam: ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

CM Siddaramaiah

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.2ರ ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದೂಡಿದೆ.

ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿತು.ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದರೆ, ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇದೇ ವೇಳೆ ದೂರುದಾರರ ಪರ ವಕೀಲರು ಕೂಡ ವಾದ ಮಂಡಿಸಿದರು. ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ಸೆ.2ರಂದು ಮಧ್ಯಾಹ್ನ 2:30ಕ್ಕೆ ಮುಂದೂಡಿತು.

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ವಿವೇಚನೆ ಬಳಸಿಯೇ ಅನುಮತಿ ನೀಡಿದ್ದಾರೆ ಎಂದು ವಕೀಲ ತುಷಾರ್ ಮೆಹ್ತಾ ವಾದ ಮಂಡಿಸಿದರು. ಬಳಿಕ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂದರ್ ಸಿಂಗ್ ವಾದ ಆರಂಭಿಸಿ, ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ ಎಂದು ಕೋರಿದರು. ಜತೆಗೆ ಮುಂದಿನ ವಾದ ಸೋಮವಾರ ಮಂಡಿಸುವುದಾಗಿ ಮನವಿ ಮಾಡಿದರು.

ವಕೀಲರ ವಾದ-ಪ್ರತಿವಾದ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿಗಳು, ಪ್ರಕರಣದಲ್ಲಿ ಸಿಎಂ ಪಾತ್ರ ಏನು ಎಂದು ಯಾರೂ ಹೇಳುತ್ತಿಲ್ಲ.ಸಿಎಂ ಪಾತ್ರದ ಬಗ್ಗೆ ನಿಮ್ಮ ಉತ್ತರವೇನು ಎಂದು ದೂರುದಾರರ ಪರ ವಕೀಲರನ್ನು ಪ್ರಶ್ನಿಸಿದರು. ಮಾಡಿದರು. ಈ ವೇಳೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಿಎಂ ವಿರುದ್ಧ ಆರೋಪಿಸುವುದಕ್ಕೆ ಏನು ಇಲ್ಲ ಎಂದರು. ಇದೇ ವೇಳೆ ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಶುರು ಮಾಡಿ, ಸಿಎಂ ಸಿದ್ದರಾಮಯ್ಯರನ್ನು ರಕ್ಷಣೆ ಮಾಡುವ ಸಲುವಾಗಿಯೇ ಕ್ಯಾಬಿನೆಟ್‌ ನಿರ್ಣಯ ಮಾಡಿದೆ. ಇಂತಹ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸುವ ಅಗತ್ಯವಿಲ್ಲ ಎಂದು ವಾದಿಸಿದರು. ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನೂ ಸೋಮವಾರಕ್ಕೆ ನ್ಯಾಯಪೀಠ ಮುಂದೂಡಿದರು.

ಏನಿದು ಪ್ರಕರಣ?
ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂದು ಮುಡಾ ನಿವೇಶನಗಳನ್ನು ಪತ್ನಿಯ ಹೆಸರಿಗೆ ಮಂಜೂರು ಮಾಡಿಸಿಕೊಂಡಿರುವ ಆರೋಪ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚಿಸಬೇಕು ಎಂದು ಕೋರಿ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್‌ ಎಂಬುವವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಅಲ್ಲದೇ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಖಾಸಗಿ ದೂರು ಸಲ್ಲಿಸಿದ್ದರು.

ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ ಮೊರೆ ಹೋಗಿದ್ದಾರೆ.