ಬೆಂಗಳೂರು: ಮುಡಾ ಹಗರಣ (Muda Scam)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐ (CBI)ಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಡಿ. 19ರಂದು ನಡೆಸಿದ ಹೈಕೋರ್ಟ್ 2025ರ ಜ. 15ಕ್ಕೆ ಮುಂದೂಡಿದೆ.
ಮುಡಾ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು 2025ರ ಜ. 15ಕ್ಕೆ ಮುಂದೂಡಿದರು. ಅಂದೇ ಅಂತಿಮ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ.
ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದರು. ಈ ವೇಳೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಸಿದ್ದರಾಮಯ್ಯ ಪರ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಮತ್ತು ಕಪಿಲ್ ಸಿಬಲ್ ಮನವಿ ಸಲ್ಲಿಸಿದರು. ಈ ವೇಳೆ 2025ರ ಜ. 15ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್, ಅಷ್ಟರಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚನೆ ನೀಡಿದೆ. ಜತೆಗೆ ಅಂದೇ ಅಂತಿಮ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಏನಿದು ಪ್ರಕರಣ?
ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂದು ಮುಡಾ ನಿವೇಶನಗಳನ್ನು ಪತ್ನಿಯ ಹೆಸರಿಗೆ ಮಂಜೂರು ಮಾಡಿಸಿಕೊಂಡಿರುವ ಆರೋಪ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚಿಸಬೇಕು ಎಂದು ಕೋರಿ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಕುಮಾರ್ ಎಂಬುವವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಅಲ್ಲದೇ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಖಾಸಗಿ ದೂರು ಸಲ್ಲಿಸಿದ್ದರು.
ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ಸುದ್ದಿಯನ್ನೂ ಓದಿ: Gruhalakshmi Scheme: ಗೃಹಲಕ್ಷ್ಮೀ ಯೋಜನೆಯ ಸದುಪಯೋಗ; ಸಿಎಂ ಸಿದ್ದರಾಮಯ್ಯ ಸಂತಸ