Tuesday, 7th January 2025

Na. D’Souza: ನಾಳೆ ಸಾಗರದಲ್ಲಿ ನಾ. ಡಿಸೋಜ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಶಿವಮೊಗ್ಗ: ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರ ಅಂತ್ಯ ಕ್ರಿಯೆ ಸೋಮವಾರ ನಡೆಯಲಿದ್ದು, ಸಾಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ ‘ದ್ವೀಪ’ ಕಾದಂಬರಿ ಸಿನಿಮಾ ಆಗಿತ್ತು. ಮೃತ ನಾ.ಡಿಸೋಜ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.

ನಾ.ಡಿಸೋಜ ಅವರ ನಿಧನದ ಬಗ್ಗೆ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ಡಾ. ನಾ. ಡಿಸೋಜ ಅವರು ಭಾನುವಾರ ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಾ ಡಿಸೋಜ ಅವರ ಪರಿಚಯ

ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬಟ್ ಡಿಸೋಜ ಅವರು 1937ರ ಜೂನ್ 6ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.
ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.

ಬರಹಗಾರರಾದ ಇವರು ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಪ್ರಾರಂಭದ ದಿನಗಳಲ್ಲಿ ‘ಪ್ರಪಂಚ’ ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. 1964ರಲ್ಲಿ ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾಯಿತು. ನಂತರ ಮಂಜಿನ ಕಾನು, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಮಾನವ – ಹೀಗೆ ಇವರು ಬರೆದಿರುವ ಕಾದಂಬರಿಗಳು ಸುಮಾರು 40. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹಲವು ಹತ್ತು ವಿಷಯಗಳನ್ನೊಳಗೊಂಡ ಅವರ ಕಾದಂಬರಿಗಳು ಹೆಚ್ಚು ಜನಪ್ರಿಯಗೊಂಡಿವೆ.

ನಾ. ಡಿಸೋಜ ಅವರ ದ್ವೀಪ, ಮುಳುಗಡೆ, ಕಾಡಿನ ಬೆಂಕಿ, ಬಳುವಳಿ, ಬೆಟ್ಟದಪುರದ ದಿಟ್ಟ ಮಕ್ಕಳು, ಆಂತರ್ಯ ಕೃತಿಗಳು ಚಲನಚಿತ್ರಗಳಾಗಿ ತೆರೆಮೇಲೆಯೂ ಮೂಡಿನಿಂತು ಪ್ರಶಸ್ತಿ ಪುರಸ್ಕಾರಕ್ಕೂ ಭಾಜನವಾಗಿದೆ. ಮಕ್ಕಳ ಸಾಹಿತ್ಯದಲ್ಲಿ ಸುಮಾರು ಹನ್ನೆರಡು ಕೃತಿಗಳನ್ನು ರಚಿಸಿದ್ದಾರೆ.

ಅಜ್ಞಾತ, ಒಂದು ಜಲಪಾತದ ಸುತ್ತ, ಕೈತಾನ್ ಗಾಂಧಿಯ ಸ್ವಾತಂತ್ರ ಹೋರಾಟ, ಜೀವಕಳೆ, ಪ್ರೀತಿಯೊಂದೆ ಸಾಲದೇ?, ಬಂಜೆ ಬೆಂಕಿ, ಪುಜ್ಞಾಬಲಿ, ನೆಲೆ, ನಡುವೆ ನಿಂತ ಜನ, ಗಾಂಧಿ ಬಂದರು, ಒಡ್ಡು, ಮಾನವ, ಮುಳುಗಡೆ, ವಿಷಾನಿಲ ಇನ್ನೂ ಅನೇಕ ಕಾದಂಬರಿಗಳನ್ನೊಳಗೊಂಡತೆ ಮಕ್ಕ, ಸಾಹಿತ್ಯವನ್ನೂ, ರೇಡಿಯೋ ನಾಟಕಗಳನ್ನೂ ನಾ.ಡಿಸೋಜ ಅವರು ರಚಿಸಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗುಲ್ವಾಡಿ ವೆಂಕಟರಾವ ಪ್ರಶಸ್ತಿ ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ ವರ್ಧಮಾನ ಪ್ರಶಸ್ತಿ ಮಾಸ್ತಿ ಪ್ರಶಸ್ತಿ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಆಳ್ವಾಸ್ ನುಡಿಸಿರಿ ಪ್ರಶಸ್ತಿ ನವದೆಹಲಿ ಕಳಾ ಪ್ರಶಸ್ತಿ ಕೇಂದ್ರಸಾಹಿತ್ಯ ಅಕಾಡಮಿಯ ಬಾಲ ಸಾಹಿತ್ಯ ಪುರಸ್ಕಾರ ಇನ್ನೂ ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಶ್ರೀಯುತರು ಭಾಜನರಾಗಿದ್ದಾರೆ. ಡಿಸೋಜ ಅವರಿಗೆ ಕರ್ನಾಟಕ ಸರ್ಕಾರ ಇತ್ತೀಚೆಗೆ 2023-24ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಈ ಸುದ್ದಿಯನ್ನೂ ಓದಿ | Prajwal Devaraj: ‘ರಾಕ್ಷಸ’ ಅವತಾರದಲ್ಲಿ ಪ್ರಜ್ವಲ್‌ ದೇವರಾಜ್‌; ಈ ಬಹು ನಿರೀಕ್ಷಿತ ಚಿತ್ರ ಶಿವರಾತ್ರಿಯಂದು ರಿಲೀಸ್‌

Leave a Reply

Your email address will not be published. Required fields are marked *