ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ (Naxal Activity) ಮತ್ತೆ ಕಂಡುಬಂದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ನಡೆಸಲಾಗುತ್ತಿದೆ. ಈ ನಡುವೆ ನಕ್ಸಲರಿಗೆ ರಾಜ್ಯ ಸರ್ಕಾರ ಆಫರ್ ಘೋಷಿಸಿದ್ದು, ನಕ್ಸಲರು ಶರಣಾದರೆ ಸಾಮಾನ್ಯ ಜೀವನಕ್ಕೆ ಪ್ಯಾಕೇಜ್ ನೀಡುವುದಾಗಿ ತಿಳಿಸಿದೆ.
ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿಕ್ರಂಗೌಡ ಸತ್ತ ನಂತರ ಅವರ ಜತೆಯಲ್ಲಿರುವ ನಕ್ಸಲರಿಗೆ ಶರಣಾಗುವಂತೆ ಹೇಳಿದ್ದೇವೆ. ಇದು ಕಠಿಣವಾದ ಹಾದಿ, ಇದರಲ್ಲಿ ನೀವು ಹೋಗುವುದು ಬೇಡ, ನಾವು ನಿಮಗೆ ಪ್ಯಾಕೇಜ್ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
ನಕ್ಸಲರ ಸಾಮಾನ್ಯ ಜೀವನಕ್ಕೆ ಪುನರ್ವಸತಿ ಪ್ಯಾಕೇಜ್ ನೀಡುತ್ತೇವೆ ಎಂದು ಕರೆಯನ್ನು ಕೊಟ್ಟಿದ್ದೇವೆ. ಕೂಂಬಿಂಗ್ ಮಾಡುತ್ತಿರುವ ಅಧಿಕಾರಿಗಳು ಕೂಡ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಕ್ಸಲರು ಶರಣಾದರೆ ಒಳ್ಳೆಯದು ಎಂದು ಹೇಳಿದ್ದಾರೆ.
ರಾಜ್ಯದ ಐವರು ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕಿಗ್ಗಾ, ಕೆರೆಕಟ್ಟೆ ಅರಣ್ಯದಲ್ಲಿ ಓಡಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹುಡಕಾಟ ನಡೆಯುತ್ತಿದೆ. ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
ಅರಣ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮುಂಡಗಾರು ಲತಾ, ಕಳಸ ತಾಲೂಕಿನ ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಗ್ರಾಮದ ಸುಂದರಿ, ರಾಯಚೂರು ಮೂಲದ ಜಯಣ್ಣ ಮತ್ತು ಶೃಂಗೇರಿ ತಾಲೂಕಿನ ಹಿತ್ತಲಮನೆಯ ರವೀಂದ್ರ ಐವರು ನಕ್ಸಲರ ತಂಡ ಕಾಫಿನಾಡಿನ ಕಾಡಿನಲ್ಲಿ ಅಡಗಿರುವ ಸಾಧ್ಯತೆ ಇದೆ.
ನಕ್ಸಲ್ ವನಜಾಕ್ಷಿ (66 ವರ್ಷ) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಳೆ. ಈಕೆ ಮೋಸ್ಟ್ ವಾಂಟೆಡ್ ನಕ್ಸಲ್ ಅಂಗಡಿ ಸುರೇಶ್ ಪತ್ನಿಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ ಪತ್ನಿ ವನಜಾಕ್ಷಿ ಅನಾರೋಗ್ಯದಿಂದ ಬಳಲುತ್ತಿರುವ ಬಗ್ಗೆ ಕರ್ನಾಟಕದ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಹೀಗಾಗಿ, ಸರ್ಕಾರ ಶರಣಾಗುವಂತೆ ಹೇಳಿದೆ. ಎಎನ್ಫ್ ಅಧಿಕಾರಿಗಳು ಕಳೆದ 4 ದಿನಗಳಿಂದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಈ ಸುದ್ದಿಯನ್ನೂ ಓದಿ | Viral Video: ಬಾವಿಯಿಂದ ಹಾವುಗಳನ್ನು ರಕ್ಷಿಸಿದ ಪ್ರಾಣಿ ರಕ್ಷಕ; ವಿಡಿಯೊ ನೋಡಿ
ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ; ಲಕ್ಷ್ಮೀ ಹೆಬ್ಬಾಳಕರ್
ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಎನ್‌ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲೇಟ್‌ಗಳನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | SSLC Exam Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ನಕ್ಸಲರನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಇಲ್ಲ
ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.