ಬೆಂಗಳೂರು: ರಾಜ್ಯದ ಮೂರು ಪ್ರತಿಷ್ಠಿತ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ತೀವ್ರ ಹಿನ್ನಡೆ ಅನುಭವಿಸಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಬೆಳಗಾವಿಯಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದ್ದರೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿ, ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. 25 ವರ್ಷಗಳ ನಂತರ ಇದೇ ಮೊದಲ ಬಾರಿಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಅಧಿಕಾರ ಹಿಡಿದಿದೆ. ಒಟ್ಟು 58 ವಾರ್ಡ್‍ಗಳ ಪೈಕಿ ಬಿಜೆಪಿ 33 ವಾರ್ಡ್‍ಗಳಲ್ಲಿ ಗೆಲುವು ಸಾಧಿಸಿದ್ದು, ಸ್ಪಷ್ಟ ಜನಾದೇಶದೊಂದಿಗೆ ಗದ್ದುಗೆಗೇರುವಲ್ಲಿ ಯಶಸ್ವಿ ಯಾಗಿದೆ. ಎಂಇಎಸ್‍ಗೆ ಮೊದಲ ಬಾರಿಗೆ ಭಾರೀ ಮುಖಭಂಗವಾಗಿದೆ. ಕೇವಲ ಎರಡು ವಾರ್ಡ್‍ಗಳಲ್ಲಿ ಮಾತ್ರ ಗೆಲುವು ಸಾಧಿಸಿರುವ ಎಂಇಎಸ್ ಬಹುತೇಕ ಕಡೆ ಅಭ್ಯರ್ಥಿಗಳು ಠೇವಣಿಯನ್ನು ಕಳೆದುಕೊಂಡಿದ್ದಾರೆ.
ಈಗಿನ ಬಲಾಬಲದಲ್ಲಿ ಏನೇ ಆದರೂ ಬಿಜೆಪಿ ಪಾಲಿಕೆಯಲ್ಲಿ ಮೇಯರ್ ಮತ್ತು ಉಪ ಮೇಯರ್ ಸ್ಥಾನ ಪಡೆಯು ವುದು ಖಚಿತವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಅಭಿಯಾನ ಮುಂದುವರೆಸಿದೆ. ಬಿಜೆಪಿ 31ವಾರ್ಡ್‍ಗಳನ್ನು ಗೆದ್ದಿದೆ. ಈ ಬಾರಿ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡಲಿದೆ ಎಂದು ಹೇಳಲಾಗಿದ್ದ ಕಾಂಗ್ರೆಸ್ 14 ವಾರ್ಡ್‍ಗಳಲ್ಲಿ ಮಾತ್ರ ಗೆಲುವು ಸಾಧಿಸಿ ಎರಡು ವಾರ್ಡ್‍ಗಳಲ್ಲಿ ಮುನ್ನಡೆ ಸಾಧಿಸಿದೆ.
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಪಾಲಿಕೆಯ ಒಟ್ಟು 58 ವಾರ್ಡ್‍ಗಳಲ್ಲಿ ಕಾಂಗ್ರೆಸ್ 17, ಬಿಜೆಪಿ 10, ಜೆಡಿಎಸ್ 2 ಹಾಗೂ ಪಕ್ಷೇತರರು ಒಂದು ಸ್ಥಾನ ಗಿಟ್ಟಿಸಿಕೊಂಡಿದೆ.
ಯಾವುದೇ ಪಕ್ಷ ಅಧಿಕಾರ ಹಿಡಿಯಲು 31 ಸ್ಥಾನಗಳು ಇರುವುದರಿಂದ ಅಂತಿಮ ಫಲಿತಾಂಶ ಪ್ರಕಟಗೊಳ್ಳುವವರೆಗೂ ಪಾಲಿಕೆ ಯಾರಿಗೆ ಒಲಿಯುತ್ತದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.ಉಳಿದಂತೆ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ತರೀಕೆರೆಯಲ್ಲಿ ಕಾಂಗ್ರೆಸ್ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ.