Wednesday, 1st January 2025

Priyank Kharge: ಪ್ರಿಯಾಂಕ್ ಕಲಬುರ್ಗಿಯ ನಿಜಾಮ ಅಲ್ಲ, ಅವರ ಅನುಯಾಯಿಗಳು ರಜಾಕರೂ ಅಲ್ಲ; ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೂಡ ಕಾರಣ. ಊರಿಗೆಲ್ಲ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashok) ವಾಗ್ಧಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ‌ ಬಿಜೆಪಿ ನಾಯಕ ಆರ್.ಅಶೋಕ್ “ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ” ಎಂದು ಒತ್ತಾಯಿಸಿದ್ದಾರೆ.

“ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ ನೋಟ್‌ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ” ಎಂದು ಹೇಳಿದ್ದಾರೆ. “ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ‌ ಕೊಡುವಂತೆ ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ” ಎಂದು ಅಶೋಕ್ ದೂರಿದ್ದಾರೆ.‌

ಗೂಂಡಾಗಳು ಪ್ರಿಯಾಂಕ್ ಖರ್ಗೆ ಆಪ್ತರು: ಆರ್‌. ಅಶೋಕ್‌ ಆಕ್ರೋಶ

ಪತ್ರಿಕಾಗೋಷ್ಠಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆಯನ್ನು ಸಾಕಷ್ಟು ತರಾಟೆಗೆ ತೆಗೆದುಕೊಂಡ ಆರ್.ಅಶೋಕ್‌ “ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷ ರೂ.ಗೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ರೂ. ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿದೆ. ಡೆತ್ ನೋಟ್‌ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಇಲ್ಲಿ ಹೊಣೆಗಾರರುʼʼ ಎಂದು ಅಶೋಕ್ ಹೇಳಿದ್ದಾರೆ.

ʼʼರಾಜು ಕಪನೂರ್, ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಈ ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಆರೋಪದಲ್ಲಿ ಬಂಧಿತನಾಗಿದ್ದ. ಇವೆಲ್ಲ ಗೊತ್ತಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರಿಂದ ದೂರವಾಗಿಲ್ಲ. ಇಂತಹ ಗೂಂಡಾ, ಸಚಿವರ ಆಪ್ತ ಎಂದರೆ ನಮ್ಮ ರಾಜ್ಯದಲ್ಲಿ ಗೂಂಡಾಗಳ, ರೌಡಿಗಳ ಸರ್ಕಾರ ನಡೆಯುತ್ತಿದೆ ಎಂದರ್ಥʼʼ ಎಂದು ಆರ್.ಅಶೋಕ್‌ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Canadian Plane Fire: ದ.ಕೊರಿಯಾ ಬೆನ್ನಲ್ಲೇ ಕೆನಡಾದಲ್ಲೂ ಭಾರೀ ವಿಮಾನ ದುರಂತ-ಲ್ಯಾಂಡಿಂಗ್‌ ವೇಳೆ ಬೆಂಕಿ!