Sunday, 24th November 2024

R Ashok: ವಕ್ಫ್‌ ಕಾಯ್ದೆಯಲ್ಲಿ ಕೂಡಲೇ ಬದಲಾವಣೆ ತರುವಂತೆ ಕಾಂಗ್ರೆಸ್‌ ಸರ್ಕಾರಕ್ಕೆ ಆರ್‌. ಅಶೋಕ್‌ ಆಗ್ರಹ

R Ashok

ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ (Congress Government) ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಗ್ರಹಿಸಿದರು. ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್‌.ಪುರದಲ್ಲಿ ಬಿಜೆಪಿಯಿಂದ (BJP) ನಡೆದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡು ಅವರು ಮಾತನಾಡಿದರು.

ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್‌ಗೆ ಹಿಂದೂಗಳು ಮತ ನೀಡಿಲ್ಲವೇ? ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | By Elections Date: 14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ದಿನಾಂಕ ಮುಂದೂಡಿಕೆ

ಬಾಬರ್‌, ಔರಂಗಜೇಬ ಮೊದಲಾದ ಮತಾಂಧ ರಾಜರು ವಕ್ಫ್‌ ಬೋರ್ಡ್‌ಗೆ ಮಾದರಿ. ಶ್ರೀರಂಗಪಟ್ಟಣದಲ್ಲಿ ನೂರಾರು ವರ್ಷಗಳಿಂದ ಇರುವ ದೇವಸ್ಥಾನವನ್ನು ಖಬರ್‌ಸ್ಥಾನ ಎಂದು ದಾಖಲೆಯಲ್ಲಿ ಬರೆಸಿದ್ದಾರೆ. ಲವ್‌ ಜಿಹಾದ್‌ ಮಾಡಿ ಹಿಂದೂ ಹೆಣ್ಣುಮಕ್ಕಳನ್ನು ಮತಾಂತರ ಮಾಡಲಾಗಿದೆ. ಈಗ ಲ್ಯಾಂಡ್‌ ಜಿಹಾದ್‌ ಮೂಲಕ ರೈತರ ಜಮೀನು ಪರಿವರ್ತನೆ ಮಾಡುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ನ ಮಗುವಿನಂತೆ ನಿದ್ರಿಸಿ ಎಂಬ ಘೋಷಣೆಯಂತೆ, ಭಯೋತ್ಪಾದಕರು ಹಾಗೂ ಮೂಲಭೂತವಾದಿಗಳು ಕರ್ನಾಟಕದಲ್ಲಿ ಮಗುವಿನಂತೆ ಆರಾಮಾಗಿ ನಿದ್ರಿಸಬಹುದು. ಭಯೋತ್ಪಾದಕರು ಡಿ.ಕೆ. ಶಿವಕುಮಾರ್‌ ಅವರ ಸಹೋದರರಾಗಿದ್ದಾರೆ. ಭಯೋತ್ಪಾದನೆ ಮಾಡಿದವರನ್ನು ನಮ್ಮವರು ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂಬಿಕೆ ಉಳಿಸಿಕೊಳ್ಳದ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಮುಸ್ಲಿಂ ಗಲಭೆಕೋರರ ಕೇಸುಗಳನ್ನು ವಾಪಸ್‌ ಪಡೆದರು. ಗಣೇಶ ಮೂರ್ತಿಯನ್ನೇ ಬಂಧನ ಮಾಡಿದರು. ಕೇವಲ ಮತಕ್ಕಾಗಿ ಇಡೀ ಕರ್ನಾಟಕವನ್ನೇ ಹಾಳು ಮಾಡುತ್ತಿದ್ದಾರೆ. ಮುಡಾ ಹಗರಣವಾದ ನಂತರ ಸಿಎಂ ಸಿದ್ದರಾಮಯ್ಯನವರ ಹಣೆಯಲ್ಲಿ ಕುಂಕುಮ ಕಾಣಿಸಿಕೊಂಡಿದೆ ಎಂದು ಟೀಕಿಸಿದರು.

ಕಾಯ್ದೆಯಲ್ಲಿ ಬದಲಾವಣೆ ತನ್ನಿ

ವಕ್ಫ್‌ ಬೋರ್ಡ್‌ ಈಗ ಸಾಬರ ಬೋರ್ಡ್‌ ಆಗಿದ್ದು, ಸಿಎಂ ಸಿದ್ದರಾಮಯ್ಯನವರು ಬೇಕಿದ್ದರೆ ಎಲ್ಲ ಭೂಮಿಯನ್ನು ಈ ಬೋರ್ಡ್‌ಗೆ ಬರೆದುಬಿಡಬಹುದು. ಇವೆಲ್ಲ ದಾನ ಕೊಟ್ಟ ಜಮೀನು ಎಂದು ವಕ್ಫ್‌ ಮಂಡಳಿ ಹೇಳುತ್ತಿದೆ. ಮುಜರಾಯಿ ಇಲಾಖೆಗೂ ದಾನದಿಂದ ಭೂಮಿ ಬಂದಿದೆ. ಆದರೆ ಅದು ಮಾತ್ರ ಸರ್ಕಾರಿ ಆಸ್ತಿಯಾಗುತ್ತದೆ. ಆದರೆ ವಕ್ಫ್‌ ಬೋರ್ಡ್‌ಗೆ ದಾನದಿಂದ ಬರುವ ಭೂಮಿ ಮಾತ್ರ ಸರ್ಕಾರಿ ಆಸ್ತಿಯಾಗುವುದಿಲ್ಲ. ಹೀಗೆಯೇ ಕಾಂಗ್ರೆಸ್‌ ರಾಜ್ಯವನ್ನು ಹಾಳು ಮಾಡಿದರೆ ಹಿಂದೂಗಳು ಈ ಆಟ ನಡೆಯಲು ಬಿಡುವುದಿಲ್ಲ. ಕೂಡಲೇ ಎಚ್ಚೆತ್ತುಕೊಂಡು ಕಾಯ್ದೆಯಲ್ಲಿ ಬದಲಾವಣೆ ಮಾಡಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಯ ಮಾತನ್ನು ನಂಬಲ್ಲ

ಸಿದ್ದರಾಮಯ್ಯನವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಯಾವಾಗ ಬೇಕಾದರೂ ಮಾತು ಬದಲಿಸುತ್ತಾರೆ. ರೈತರಿಗೆ ಸಂಪೂರ್ಣವಾಗಿ ಜಮೀನಿನ ದಾಖಲೆಗಳು ಸಿಕ್ಕಿ, ಅವರ ಹೆಸರಿಗೆ ಜಮೀನು ಸಂಪೂರ್ಣವಾಗಿ ನೋಂದಣಿಯಾಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಈ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ವಕ್ಫ್‌ ಬೋರ್ಡ್‌ ಆಸ್ತಿ ಕಬಳಿಕೆ ಒಂದು ದಂಧೆಯಾಗಿದ್ದು, ಇದನ್ನು ಮಟ್ಟ ಹಾಕಬೇಕಿದೆ ಎಂದರು.

ಈ ಸುದ್ದಿಯನ್ನೂ ಓದಿ | Ayushman Vaya Vandana Card: ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ?

ವಕ್ಫ್‌ ಮಂಡಳಿಯ ಎಲ್ಲ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಿ: ಆರ್‌. ಅಶೋಕ್‌ ಪತ್ರ

ಕರ್ನಾಟಕದ ವಕ್ಫ್‌ ಮಂಡಳಿಗೆ ಸಂಬಂಧಿಸಿದ ಎಲ್ಲ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಕೇಂದ್ರ ಸಚಿವರಿಗೆ ಹಾಗೂ ವಕ್ಫ್‌ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ.

ರೈತರ ಜಮೀನು ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್‌ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್‌ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್‌ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರ್‌. ಅಶೋಕ ಪತ್ರದಲ್ಲಿ ವಿವರಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್‌ ನೀಡಲಾಗಿದೆ ಎಂದು ನೂರಾರು ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್‌ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ. ಇಷ್ಟೇ ಅಲ್ಲದೆ, ವಕ್ಫ್‌ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್‌ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ. 13ನೇ ಶತಮಾನದಷ್ಟು ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂಧಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್‌ ತನ್ನದೆಂದು ಘೋಷಿಸಿಕೊಂಡಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Lalbagh Entry Fee: ಗಮನಿಸಿ, ಲಾಲ್‌ಬಾಗ್‌ ಪ್ರವೇಶ ಇನ್ನು ದುಬಾರಿ

ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿಯು ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜತೆ ಮಾತನಾಡಬೇಕು ಹಾಗೂ ವಕ್ಫ್‌ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕೆಂದು ಆರ್‌. ಅಶೋಕ್‌ ಮನವಿ ಮಾಡಿದ್ದಾರೆ.