Thursday, 12th December 2024

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದಲ್ಲಿ ಅ.6ರ ತನಕ ಮಳೆ 

ಬೆಂಗಳೂರು: ಕರ್ನಾಟಕದಲ್ಲಿ ಚಂಡಮಾರುತದ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾ ಗುತ್ತಿದೆ. ಅ.6ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ಮತ್ತು ಸೋಮವಾರ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಹಗುರವಾದ ಮಳೆಯಾಗಲಿದೆ. ಅ.5 ಮತ್ತು 6ರಂದು ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅ.3 ಮತ್ತು 4ರಂದು, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅ.5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಶಾಹೀನ್ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಕರ್ನಾಟಕದ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯ ಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಭಾನುವಾರ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಅ.6ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಆದರೆ ವಿದ್ಯುತ್ ಉತ್ಪಾದನೆಗೆ ಆಧಾರವಾಗಿರುವ ಲಿಂಗನಮಕ್ಕಿ ಇನ್ನೂ ಭರ್ತಿಯಾಗಿಲ್ಲ. 38.04 ಮೀಟರ್‌ನ ಕೆಆರ್‌ಎಸ್ ಜಲಾಶಯ ಸಹ ಇನ್ನೂ ಭರ್ತಿಯಾಗಿಲ್ಲ. ಕೆಆರ್‌ಎಸ್ ಭರ್ತಿಯಾದರೆ ಮಂಡ್ಯ, ಮೈಸೂರು, ಬೆಂಗಳೂರು ನಗರಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವುದಿಲ್ಲ.