Thursday, 12th December 2024

Renuka Yellamma Temple: ಸವದತ್ತಿ ಕ್ಷೇತ್ರದಲ್ಲಿ ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ: ಸಿಎಂ

Renuka Yellamma Temple

ಸವದತ್ತಿ: ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಬೇಕು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ (Renuka Yellamma Temple) ವ್ಯವಸ್ಥೆ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದ್ದಾರೆ.

ದೇವರು-ಧರ್ಮದ ಹೆಸರಲ್ಲಿ ದೇಶ-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಪ್ರಯಾಣಿಸಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ. ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಾನಕ ಮಾತನಾಡ್ತಾರಲ್ಲಾ? ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂತಹ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮಷಿನ್ ಕೊಡಿಸಿದ್ದಾರೆ. ಇಂತಹವು ನೂರಾರು ಉದಾಹರಣೆಗಳಿವೆ ಎಂದರು.

ಈ ಸುದ್ದಿಯನ್ನೂ ಓದಿ | DK Shivakumar: ಬಿಜೆಪಿ ಕಾಲದಲ್ಲೂ ಎಷ್ಟೋ ಕೇಸ್ ವಾಪಸ್ ಪಡೆದಿದ್ರು: ಡಿಕೆಶಿ

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.