Wednesday, 30th October 2024

S M Krishna: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

S M Krishna

ಬೆಂಗಳೂರು: ಮಾಜಿ ಸಿಎಂ ಎಸ್.​​ಎಂ. ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ರಾಜಕಾರಣಿ ಎಸ್.ಎಂ.​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ಎಸ್.​ಎಂ. ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್​.ಎಂ.​​ ಕೃಷ್ಣ ಅವರಿಗೆ ಮಣಿಪಾಲ್​ ಆಸ್ಪತ್ರೆಯಲ್ಲಿ ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಹಿಂದೆ ಶ್ವಾಸಕೋಶ ಸಮಸ್ಯೆಯಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಎಸ್‌.ಎಂ ಕೃಷ್ಣ ಅವರು ಸುದೀರ್ಘ ನಾಲ್ಕು ತಿಂಗಳ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರು. ಇದೀಗ ಮತ್ತೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಎಸ್.​ಎಂ. ಕೃಷ್ಣ ಅವರು 1999 ರಿಂದ 2004ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ 2004ರಿಂದ 2008ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2009ರಿಂದ ಅಕ್ಟೋಬರ್ 2012ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2017ರ ಮಾರ್ಚ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ ಸುದ್ದಿಯನ್ನೂ ಓದಿ | High Court: 300 ರು. ಲಂಚ ಪಡೆದ ಟೈಪಿಸ್ಟ್‌ಗೆ ಶಿಕ್ಷೆ ಕಾಯಂ ಮಾಡಿದ ಹೈಕೋರ್ಟ್‌

ಕಳೆದ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ರಾಜಕೀಯ ನಿವೃತ್ತಿ ಘೋಷಣೆ ಮಾಡುವ ಮೂಲಕ ಎಸ್‌.ಎಂ.ಕೃಷ್ಣ ಅವರು ಅಚ್ಚರಿ ಮೂಡಿಸಿದ್ದರು. ವಯಸ್ಸು 91 ವರ್ಷ ಆದ ಹಿನ್ನೆಲೆಯಲ್ಲಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಎಸ್. ಎಂ. ಕೃಷ್ಣ ತಿಳಿಸಿದ್ದರು.