Sunday, 24th November 2024

Sainik School: ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.67 ಸೀಟ್‌; ಕೇಂದ್ರಕ್ಕೆ ಪ್ರಸ್ತಾವನೆ

Sainik School

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ (Sainik School) ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ 4ನೇ ಸಭೆ ನಡೆದಿದ್ದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು.

ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ 179.30 ಕೋಟಿ ರೂ. ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಸೈನಿಕ ಶಾಲೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನುಳಿದ ಸಿವಿಲ್‌ ಕಾಮಗಾರಿಗಳನ್ನು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುವ ರೂ. 30 ಕೋಟಿ ಕಾಮಗಾರಿ ಅನುಷ್ಠಾನ ಕುರಿತು ಕುರಿತು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಪರಿಶೀಲಿಸಿ ವರದಿಯನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಾಯಂ ಶಿಕ್ಷಕರ ನೇಮಕಾತಿಗೆ ಸೂಚನೆ

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್‌ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡುವಂತೆ ಸಿಎಂ ಸೂಚಿಸಿದರು. ಸೈನಿಕ ಶಾಲೆಯಲ್ಲಿ ಕಾಯಂ ಶಿಕ್ಷಕರ ನೇಮಕಾತಿಗೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಹೇಳಿದರು.

ಪ್ರಾಧಿಕಾರದಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ, ಸೌಲಭ್ಯ ಕಲ್ಪಿಸುವ ಕುರಿತಂತೆ ನೀಲ ನಕಾಶೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರಿಗೆ ಸಿಎಂ ಸೂಚನೆ ನೀಡಿದರು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ 75.29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್‌ ಎರಡನೇ ವಾರದ ಒಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಸಂಗೊಳ್ಳಿ ರಾಯಣ್ಣ ಮ್ಯೂಸಿಯಂಗೆ ಕಾಂಪೌಂಡ್‌ ನಿರ್ಮಾಣಕ್ಕೆ ಅಗತ್ಯವಾದ ಅಂದಾಜು ಪಟ್ಟಿಯನ್ನು ಸಲ್ಲಿಸಬೇಕು. ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯನ್ನು ಈಗಾಗಲೇ ಲೋಕಾರ್ಪಣೆ ಮಾಡಲಾಗಿದ್ದು, ಉತ್ತಮ ಪ್ರವಾಸಿ ತಾಣವಾಗಿ ರೂಪುಗೊಂಡಿದೆ. ಇಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡುವ ಉದ್ದೇಶದಿಂದ ಪ್ರವಾಸಿ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಇನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 2024-25 ನೇ ಸಾಲಿನ ಕ್ರಿಯಾ ಯೋಜನೆ ರೂ. 15.48 ಕೋಟಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಲಹಾ ಸಮಿತಿ ರಚನೆ ಮಾಡಲು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | Guest Teachers: ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ; ವೇತನ ಪಾವತಿಗೆ 250 ಕೋಟಿ ಬಿಡುಗಡೆ ಮಾಡಿದ ಸರ್ಕಾರ

ಸಭೆಯಲ್ಲಿ ಸಚಿವರಾದ ಸಚಿವರಾದ ಶಿವರಾಜ ತಂಗಡಗಿ, ಭೈರತಿ ಸುರೇಶ್‌, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಮತ್ತಿತರರು ಉಪಸ್ಥಿತರಿದ್ದರು.