ಮಂಡ್ಯ: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಎಸ್‌ಎಂ ಕೃಷ್ಣ (SM Krishna Death) ಅವರು ನಿನ್ನೆ ಸಂಜೆ ಪಂಚಭೂತಗಳಲ್ಲಿ ಲೀನರಾದರು. ಮೊನ್ನೆ ಮುಂಜಾನೆ ಮೃತಪಟ್ಟ ಅವರಿಗೆ ಅವರ ಹುಟ್ಟೂರು (Mandya news) ಸೋಮನಹಳ್ಳಿಯಲ್ಲಿ ಅಂತ್ಯಸಂಸ್ಕಾರಗಳನ್ನು (SM Krishna Cremation) ನೆರವೇರಿಸಲಾಯಿತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಸಾರ್ವಜನಿಕ ಅಂತಿಮ ದರ್ಶನದ ಬಳಿಕ ಎಸ್.ಎಂ. ಕೃಷ್ಣ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಬುಧವಾರ ಸೋಮನಹಳ್ಳಿಯಲ್ಲಿಯೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನಡೆದಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವ ಪೂರ್ವಕವಾಗಿ ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯ್ತು.
ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆದಿದ್ದು, ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿ ಸ್ಪರ್ಶ ಮಾಡಿದರು. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಕರ್ನಾಟಕ ರಾಜಕೀಯ ಮುತ್ಸದ್ದಿ ಎಸ್.ಎಂ ಕೃಷ್ಣ ಅವರಿಗೆ ಕಣ್ಣೀರಿನ ವಿದಾಯ ಹೇಳಲಾಯಿತು.
ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ. ದಿವಂಗತರ ಗೌರವಾರ್ಥವಾಗಿ ಬುಧವಾರ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ದಿನಾಂಕ:12.12.2024 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ನಡೆಯುತ್ತಿದೆ. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.