ಬೆಂಗಳೂರು: ವಕ್ಫ್ ಆಸ್ತಿ ವಿವಾದ (Waqf Board) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು, ಪದಾಧಿಕಾರಿಗಳು ಆಕ್ರೋಶಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಮೀರ್ ಅಹ್ಮದ್ ಅನಗತ್ಯ ಹೇಳಿಕೆಗಳಿಂದ ಪದೇಪದೆ ಸರ್ಕಾರ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ ಗೊಂದಲ ಸೃಷ್ಟಿ ಮಾಡಿದ್ದರು. ಹೀಗಾಗಿ ತಾವು ಮಧ್ಯ ಪ್ರವೇಶಿಸಿ ಜಮೀರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರಿ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಉಪ ಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ತಾವೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಮೀರ್ ವಿರುದ್ಧ ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ ಕೈ ಶಾಸಕರು, ಜಮೀರ್ ಹೇಳಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Shiggaon By Election: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು ಅಷ್ಟೇ ಸತ್ಯ ಎಂದ ಸಿದ್ದರಾಮಯ್ಯ
ವಿಜಯಪುರ, ಬಾಗಲಕೋಟೆ, ಕಲಬುರಗಿಯಲ್ಲಿ ರೈತರಿಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಶಾಸಕರು ವಿರೋಧ ಎದುರಿಸುವಂತಾಗಿತ್ತು. ಇದು ಉಪ ಚುನಾವಣೆಯಲ್ಲೂ ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಶಾಸಕರು ಸಿಎಂ ಸಿದ್ದರಾಮಯ್ಯಗೆ ಜಮೀರ್ ವಿರುದ್ಧ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಕ್ಪ್ ನೋಟಿಸ್ ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದರು. ಅಲ್ಲದೆ, ರೈತರ ಪಹಣಿಯಲ್ಲೂ ಉಲ್ಲೇಖಗೊಂಡಿದ್ದ ವಕ್ಫ್ ಭೂಮಿ ಎಂಬುವುದನ್ನು ರದ್ದು ಮಾಡುವಂತೆ ಆದೇಶಿಸಿದ್ದರು.