ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed Khan) ಅವರಿಗೆ ಲೋಕಾಯುಕ್ತ (Lokayukta) ಪೊಲೀಸರು ಸಮನ್ಸ್ ನೀಡಿದ್ದಾರೆ.
ಕಳೆದ ಶನಿವಾರ ಲೋಕಾಯುಕ್ತ ಅಧಿಕಾರಿಗಳು ಸಚಿವ ಜಮೀರ್ ಅಹ್ಮದ್ ಅವರಿಗೆ ಸಮನ್ಸ್ ನೀಡಿದ್ದು, ಡಿಸೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತಾಗಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಜಮೀರ್ ವಿರುದ್ಧ ಎಫ್‌ಐಆರ್ ಕೂಡ ದಾಖಲಿಸಲಾಗಿದೆ. ಇದೇ ಹೊತ್ತಲ್ಲಿ ಲೋಕಾಯುಕ್ತ ಸಮನ್ಸ್ ನೀಡಲಾಗಿದೆ.
ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಕ್ಷಮೆಯಾಚನೆ ಮಾಡಿದ್ದರು. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳುವ ಮೂಲಕ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದರು.
ನಂತರ, “ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಅಂತಿದ್ದೆ. ಅವರು ನನ್ನನ್ನ ಕುಳ್ಳ ಎನ್ನುತ್ತಿದ್ದರು. ನಾನು ಈ ರೀತಿ ಕರೆಯುತ್ತಿರುವುದು ಇಂದು ನಿನ್ನೆಯದಲ್ಲ. ಬಹಳ ವರ್ಷಗಳ ಹಿಂದೆ ನಾವು ಅಷ್ಟೊಂದು ಅನ್ಯೋನ್ಯವಾಗಿ ಇದ್ದೆವು. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆʼʼ ಎಂದು ಕ್ಷಮೆ ಕೇಳಿದ್ದರು.