Thursday, 12th December 2024

Zameer ahmed: ಎಚ್‌ಡಿಕೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕ್ಷಮೆ ಕೋರಿದ ಜಮೀರ್‌ ಅಹ್ಮದ್‌

Zameer ahmed

ಮೈಸೂರು: ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಜಮೀರ್‌ ಅಹ್ಮದ್‌ (Zameer ahmed) ಕ್ಷಮೆಯಾಚನೆ ಮಾಡಿದ್ದಾರೆ. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳುವ ಮೂಲಕ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.

ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಅಂತಿದ್ದೆ. ಅವರು ನನ್ನನ್ನ ಕುಳ್ಳ ಎನ್ನುತ್ತಿದ್ದರು. ನಾನು ಈ ರೀತಿ ಕರೆಯುತ್ತಿರುವುದು ಇಂದು ನಿನ್ನೆಯದಲ್ಲ. ಬಹಳ ವರ್ಷಗಳ ಹಿಂದೆ ನಾವು ಅಷ್ಟೊಂದು ಅನ್ಯೋನ್ಯವಾಗಿ ಇದ್ದೆವು. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Dr BR Ambedkar: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಿದ್ಧರಾಗಿದ್ರು: ಕಾಂಗ್ರೆಸ್ ಮಾಜಿ ಶಾಸಕ ವಿವಾದಿತ ಹೇಳಿಕೆ!

ಜಮೀರ್‌ ಅಹ್ಮದ್‌ ಏನು ಹೇಳಿದ್ದರು?

ಚನ್ನಪಟ್ಟಣದಲ್ಲಿ ವಿಧಾನಸಭೆ (Channapatna Bypoll) ಉಪಚುನಾವಣೆ ಪ್ರಚಾರ ಕಾವೇರಿದ್ದು, ಪ್ರಚಾರದ ಭರಾಟೆಯ ನಡುವೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ (Zameer Ahmed khan)​ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಭಾನುವಾರ ಅವಹೇಳನಕಾರಿಯಾಗಿ ಮಾತನಾಡಿದ್ದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಭಾಷಣದಲ್ಲಿ ಎಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್​​” ಎಂದು ಉರ್ದುವಿನಲ್ಲಿ ಹೇಳಿದ್ದರು.

“ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್​ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತೇವೆ ಎಂದು ವಾಗ್ದಾಳಿ ಮಾಡಿದ್ದರು. ಸಚಿವರ ಈ ಹೇಳಿಕೆ ಜೆಡಿಎಸ್‌ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Zameer Ahmed: ಸಚಿವ ಜಮೀರ್‌ ಅಹ್ಮದ್‌ ಮೇಲೆ ರಾಜ್ಯಪಾಲರಿಗೆ ನ್ಯಾಯಾಂಗ ನಿಂದನೆ ದೂರು

ಜಮೀರ್​ ಅಹ್ಮದ್​ ಈ ಹಿಂದೆಯೂ ಇದೇ ರೀತಿಯಾದ ಹೇಳಿಕೆ ನೀಡಿದ್ದರು. 2021ರಲ್ಲಿ ಬೀದರ್​ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಎಚ್​.ಡಿ. ಕುಮಾರಸ್ವಾಮಿ ಅವರನ್ನು ಜಮೀರ್​ ಅಹ್ಮದ್​ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದರು.