ಪಲ್ನಾಡು: ವಿದ್ಯಾರ್ಥಿಯೊಬ್ಬನಿಗೆ ಹಿರಿಯ ವಿದ್ಯಾರ್ಥಿಗಳು ವಿದ್ಯುತ್ ಶಾಕ್ ನೀಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಪಲ್ನಾಡು (Palnadu district) ಜಿಲ್ಲೆಯಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ (Viral Video) ಆಗಿದ್ದು, ಸಂತ್ರಸ್ತ ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ (Dachepalli Government Junior College) ನಡೆದಿದೆ ಎನ್ನಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.
ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ಮೀಡಿಯೇಟ್ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ವಿದ್ಯುತ್ ಶಾಕ್ ನೀಡಿದೆ ಎನ್ನಲಾಗಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳು ಎಲ್ಲರೂ ಎರಡನೇ ವರ್ಷದ ವಿದ್ಯಾರ್ಥಿಗಳು. ಅಪ್ರಾಪ್ತರಾಗಿರುವ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದೊಯ್ದು ಥಳಿಸಿ ವಿದ್ಯುತ್ ಶಾಕ್ ನೀಡಿದ್ದಾರೆ ಎನ್ನಲಾಗಿದೆ.
ಇದರ ವಿಡಿಯೊ ಚಿತ್ರೀಕರಣವನ್ನು ನಡೆಸಿರುವ ಆರೋಪಿಗಳು ಸಂತ್ರಸ್ತ ವಿದ್ಯಾರ್ಥಿಗೆ ಕೊಲೆ ಬೆದರಿಕೆಯನ್ನು ಹಾಕಿದ್ದಾರೆ. ಈ ಘಟನೆಯಲ್ಲಿ ಹೊರಗಿನ ವ್ಯಕ್ತಿಯೊಬ್ಬ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಸಂತ್ರಸ್ತ ವಿದ್ಯಾರ್ಥಿಯ ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ಕುರಿತು ಕಾಲೇಜು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎನ್ನಲಾಗಿದೆ.