ವಿಶ್ವವಾಣಿ ವರದಿಗೆ ಎಚ್ಚೆತ್ತ ಸಿಎಂ ಕಚೇರಿ: ಕಲುಷಿತ ನೀರಿನ ವರದಿ ಸಲ್ಲಿಕೆ
ಶಹಾಪುರ: ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ. ಜೂ.15ರಂದು ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದ ಕುರಿತು ಜೂ.18ರಂದು ವಿಶ್ವವಾಣಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು.
ಇದನ್ನೂ ಓದಿ: Vishwavani Impact: ಸ್ಮೃತಿ ಭವನ ನಿರ್ಮಾಣಕ್ಕೆ ಅನುಮತಿ ನಿರಾಕರಣೆ
ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕರಣದ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯಿ ಸಿರುವ ಶಹಾಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಅವರು, ಗ್ರಾಮದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಕಲುಷಿತ ಕುಡಿಯುವ ನೀರಿನ ಮೂಲಗಳನ್ನು ಮುಚ್ಚಲಾಗಿದ್ದು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.