Sunday, 10th November 2024

ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸಬೇಕಿದೆ

ಜಗತ್ತಿನ ಒಟ್ಟು ಆತ್ಮಹತ್ಯೆಗಳ ಪೈಕಿ ಶೇ.೭೭ರಷ್ಟು ಮಧ್ಯಮ ಮತ್ತು ಕೆಳ ಆದಾಯದ ದೇಶಗಳಲ್ಲಿ ಸಂಭವಿಸುತ್ತವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ತಿಳಿಸಿದೆ. ಭಾರತದಲ್ಲಿ ಪ್ರತಿ ವರ್ಷ ೧.೬೪ ಲಕ್ಷ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಅಂದರೆ ಒಂದು ಲಕ್ಷ ಜನರಲ್ಲಿ ೧೨ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಭಾರತದಲ್ಲಿ ವಾಸ್ತವದಲ್ಲಿ ಇನ್ನೂ ಹೆಚ್ಚು ಆತ್ಮಹತ್ಯೆಗಳು ನಡೆಯುತ್ತಿವೆ. ಎಫ್ ಐಆರ್ ದಾಖಲಾದ ಆತ್ಮಹತ್ಯೆ ಪ್ರಕರಣಗಳು ಮಾತ್ರ ಎನ್‌ಸಿಆರ್‌ಬಿ ವರದಿಯಲ್ಲಿ ಉಲ್ಲೇಖವಾಗುತ್ತವೆ. ಕುಟುಂಬದ ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಬಹಿರಂಗವಾದರೆ, ಆ ಕುಟುಂಬದ ಹೆಣ್ಣು ಮತ್ತು ಗಂಡು ಮಕ್ಕಳ ಮದುವೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಆತ್ಮಹತ್ಯೆಯನ್ನು ಬಹಿರಂಗ ಪಡಿಸದೇ ಇರಲು ಜನರು ಬಯಸುತ್ತಾರೆ.

೨೦೧೭ರವರೆಗೆ, ಆತ್ಮಹತ್ಯೆ ಪ್ರಯತ್ನವು ಶಿಕ್ಷಾರ್ಹ ಅಪರಾಧವಾಗಿತ್ತು. ಆತ್ಮಹತ್ಯೆಯು ಕಾನೂನು ಸಮಸ್ಯೆಗಳನ್ನು ಉಂಟು ಮಾಡಬಹುದು ಎಂಬ ಭಾವನೆಯೂ ಜನರಲ್ಲಿ ಇದೆ. ಈ ಎಲ್ಲ ಕಾರಣ ಗಳಿಂದ ಆತ್ಮಹತ್ಯೆ ಪ್ರಯತ್ನ ಮತ್ತು ಆತ್ಮಹತ್ಯೆಯನ್ನು ಮುಚ್ಚಿಡುವ ಸಾಧ್ಯತೆಗಳೇ ಹೆಚ್ಚು. ಜಾಗತಿಕ ಅನಾರೋಗ್ಯ ಹೊರೆ ವರದಿಯ ಪ್ರಕಾರ, ಭಾರತದಲ್ಲಿ ಶೇ.೬೩ರಷ್ಟು ಆತ್ಮಹತ್ಯೆಗಳಷ್ಟೇ ದಾಖ ಲಾಗುತ್ತವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ಪ್ರತಿ ವರ್ಷ ಏಳು ಲಕ್ಷಕ್ಕೂ ಹೆಚ್ಚು ಮಂದಿ ಆತ್ಮಹತ್ಯೆ ಮಾಡಿಕೊಂಡು ತಮ್ಮ ಜೀವನ ಕೊನೆಗೊಳಿಸುತ್ತಿದ್ದಾರೆ.

ಇದರ ೨೦ ಪಟ್ಟಿಗೂ ಹೆಚ್ಚು ಮಂದಿ ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಾರೆ. ಇದಕ್ಕಿಂತ ಎಷ್ಟೋ ಪಟ್ಟು ಹೆಚ್ಚು ಜನರು ಆತ್ಮಹತ್ಯೆ ಕುರಿತು ಯೋಚಿಸು
ತ್ತಿರುತ್ತಾರೆ. ತೀವ್ರ ವೇದನೆ ಅಥವಾ ಸಮಸ್ಯೆಗಳಿಂದ ಬಳಲುತ್ತಿರುವ ಲಕ್ಷಾಂತರ ಮಂದಿಯಲ್ಲಿ ಆತ್ಮಹತ್ಯಾ ಮನೋಭಾವ ಇರುತ್ತದೆ ಎನ್ನಲಾಗಿದೆ. ಕರ್ನಾಟಕದಲ್ಲೂ ಪ್ರತಿ ವರ್ಷ ಶೇ.೮ ರಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಗಂಭೀರವಾದ ಸಮಸ್ಯೆಯಾಗಿ ಪರಿಣಮಿಸಿದೆ. ಇಂದಿನ ದಿನಗಳಲ್ಲಿ ಅನೇಕರು ಒತ್ತಡದಲ್ಲಿ ಕೆಲಸ ಮಾಡುತ್ತಿರುವುದರಿಂದಲೇ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೆ. ಮಾನಸಿಕ ಆರೋಗ್ಯದ ಕುರಿತು ಅರಿವಿನ ಕೊರತೆಯಿಂದಾಗಿ ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸಿ ಆತ್ಮಹತ್ಯೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಿದೆ