ಬೆಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮುಂಗಾರು ಉತ್ತೇಜನಗೊಂಡಿದ್ದು, ಇಂದು (ಅಕ್ಟೋಬರ್ 19) ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು (Karnataka Weather) ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದರೆ, ಬಿದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಜಡಿಮಳೆ ಮುಂದುವರಿಯಲಿದೆ.
ಇನ್ನು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 29°C ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.