ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಸಮುದ್ರದಲ್ಲಿನ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 25, 2026 9:10 AM

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಹವಾಮಾನ (Karnataka Weather) ವೈಪರೀತ್ಯ ಹಾಗೂ ಸಮುದ್ರದಲ್ಲಿನ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇಂದು (ಅಕ್ಟೋಬರ್ 25, 2026) ಮುಖ್ಯವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಅಬ್ಬರ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ ಸುತ್ತಮುತ್ತ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬರಬಹುದು.

ಬರದ ಆತಂಕದ ನಡುವೆ ಹಾವೇರಿಗೆ ಮಳೆರಾಯನ ಸಿಂಚನ; ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಗುಡುಗು ಸಹಿತ ಮಳೆಯಾಗುವ ಭಾರಿ ಸಾಧ್ಯತೆಯಿದೆ. ಸದ್ಯ 22°C ತಾಪಮಾನವಿದ್ದು, ಸಂಪೂರ್ಣವಾಗಿ ಮೋಡ ಕವಿದ ವಾತಾವರಣವಿದೆ. ಹಿಂಗಾರು ಮಳೆ ಸಕ್ರಿಯವಾಗಿರುವುದರಿಂದ ಎಂದಿನ ಬಿಸಿಲಿಗಿಂತ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಮುಂದಿನ ಎರಡು ದಿನಗಳ ಕಾಲ (ಮಂಗಳವಾರದವರೆಗೆ) ಬೆಂಗಳೂರಿನಲ್ಲಿ ಇದೇ ರೀತಿಯ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.