ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಲ್ಲಿಯೇ ಭಾರೀ ಮಳೆಯಾಗುತ್ತಿದ್ದು ಕರಾವಳಿ ಮತ್ತು (Karnataka weather) ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ತತ್ತರಿಸಿ ಹೋಗಿದೆ. ಕಳೆದ 2 ದಿನಗಳಿಂದ ಭಾರಿ ಮಳೆ ಸುರಿದಿದೆ. ಇದರ ನಡುವೆ ಅಲ್ಲಲ್ಲಿ ಗುಡ್ಡ ಕುಸಿತ, ಮರ ಮುರಿದು ಬಿದ್ದಿರುವ ಘಟನೆಗಳೂ ಸಂಭವಿಸುತ್ತಿದೆ. ಇದೀಗ ಹವಾಮಾನ ಇಲಾಖೆ ಪ್ರಕಟಿಸಿರುವ ವರದಿ ಪ್ರಕಾರ ನಾಳೆ ಆಗಸ್ಟ್ 3ರಂದು ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ ಬಾರೀ ಮಳೆ ಮುನ್ಸೂಚನೆ ನೀಡಿದೆ.
ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ನಾಳೆಯಿಂದ ಮುಂದಿನ ಒಂದು ವಾರ ಮಳೆ ಆರ್ಭಟ ಮುಂದುವರೆಯಲಿದೆ.
ಇಂದು ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಂತೆಯೇ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಕರಾವಳಿ ಭಾಗದ ಜನರು ಹಾಗೂ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜೊತೆಗೆ ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗೆ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಅದೇ ರೀತಿ ಬಳ್ಳಾರಿ , ಬೆಂಗಳೂರು (ಗ್ರಾಮೀಣ, ನಗರ) ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.