ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ರಾಜ್ಯದ ಇತರ ಭಾಗಗಳಲ್ಲಿ ಮಂಕಾಗಿದೆ. ಕರಾವಳಿ ಹಾಗೂ ಮಲೆನಾಡು ಉತ್ತಮ ಮಳೆಯಾದರೆ, ಉತ್ತರ ಕರ್ನಾಟಕ-(Karnataka Weather) ದಕ್ಷಿಣ ಕರ್ನಾಟಕದ ಹಲವೆಡೆ ಹಗುರ ಮಳೆಯಾಗುತ್ತಿದೆ. ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಜು.1 ಮತ್ತು 2ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 29 ರಿಂದ ಜುಲೈ 5 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಮತ್ತು ಉತ್ತರ ಕನ್ನಡ- ಉಡುಪಿ-ದಕ್ಷಿಣ ಕನ್ನಡದಲ್ಲಿ ಮಳೆಯ ಹಿನ್ನಲೆಯಲ್ಲಿ ಜುಲೈ 5 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಧಾರವಾಡ, ಚಿಕ್ಕಮಂಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 3 ರಿಂದ ಮಲೆನಾಡು ಭಾಗಗಳಲ್ಲೂ ಅತಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಕರಾವಳಿಯ 3 ಜಿಲ್ಲೆಗಳ ಜೊತೆಗೆ ಹಾಸನ, ಚಿಕ್ಕಮಂಗಳೂರು, ಕೊಡಗು ಹಾಗೂ ಶಿವಮೊಗ್ಗಕ್ಕೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಭಾರೀ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ರೈತರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಇನ್ನುಳಿದ ಭಾಗಗಳಲ್ಲಿ ಜೂ.28ರವರೆಗೂ ಸಾಧಾರಣ ಮಳೆ
ಇನ್ನು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.