ಬೆಂಗಳೂರು: ಮುಂದಿನ ಐದು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ (Karnataka Weather) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 3 ದಿನ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 23ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗುವ ಸೂಚನೆಯಿದೆ.
ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು, ಮಂಡ್ಯ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌ನಿಂದ 22 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Monsoon Rain Update: ಮೇ 26ರಂದು ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ!
ಮೇ 23 ರಂದು ದಿನವಿಡೀ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಮಳೆಯ ಪ್ರಮಾಣ ಕೊಂಚ ತಗ್ಗಲಿದ್ದು, ಗುಡುಗು ಸಹಿತ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 22°C ದಾಖಲಾಗುವ ಸಂಭವವಿದೆ. ಮೇ 24 ರಂದು ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ವಾರಾಂತ್ಯದಲ್ಲೂ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.