ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆ ವರುಣನ ಸಿಂಚನವಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಮಾ.9 ಮತ್ತು 10ರಂದು ಒಣ ಹವೆಯ ವಾತಾವರಣ ಇರಲಿದ್ದು, ನಂತರ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಬೇಸಿಗೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka weather) ಸಾಧ್ಯತೆ ಇದೆ. ಇನ್ನು ಮುಂದಿನ 5 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-4° C ಯಷ್ಟು ಹೆಚ್ಚಳವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕಲಬುರಗಿಯಲ್ಲಿ ಶುಕ್ರವಾರ ಅತೀ ಹೆಚ್ಚು ಉಷ್ಣಾಂಶ 39.2 ಡಿ.ಸೆ ದಾಖಲಾಗಿದೆ. ಇನ್ನು ದಾವಣಗೆರೆಯಲ್ಲಿ ಅತೀ ಕಡಿಮೆ ಉಷ್ಣಾಂಶ 13.5 ಡಿ.ಸೆ. ದಾಖಲಾಗಿದೆ.
ಮಾರ್ಚ್ 9ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾ.10ರಂದು ಕೂಡ ಇದೇ ರೀತಿಯ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಇನ್ನು ಮಾ.11 ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮಾ.12ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.13ರಂದು ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.14ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಮಕ್ಕಳಲ್ಲಿ ಕಾಡುತ್ತಿದೆಯೇ ಬೊಜ್ಜಿನ ಸಮಸ್ಯೆ? ಪೋಷಕರೇ ಈಗ್ಲೇ ಹುಷಾರಾಗಿರಿ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 20°C ಇರುವ ಸಾಧ್ಯತೆ ಇದೆ.