ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಇಂದು (ಸೆಪ್ಟೆಂಬರ್ 10) ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ (Karnataka Weather) ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಗದಗ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲೂ ನಾಳೆ ಮಳೆಯ ವಾತಾವರಣ ಕಂಡುಬರುವ ಸಾಧ್ಯತೆ ಇದೆ. IMDಯ ಜಿಲ್ಲಾ ಮಟ್ಟದ ಮುನ್ಸೂಚನೆಯ ಪ್ರಕಾರ, ಬೆಂಗಳೂರು ನಗರದಲ್ಲಿ ನಾಳೆ ಹಗುರ ಮಳೆಯಾಗಲಿದ್ದು, ಗರಿಷ್ಠ ತಾಪಮಾನ ಸುಮಾರು 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಬಹುದು. ಇನ್ನು ಸೆಪ್ಟೆಂಬರ್ 11 ರಂದು ದಕ್ಷಿಣ ಒಳನಾಡಿನಲ್ಲಿ ಜೋರು ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯನ್ನು IMD ಸೂಚಿಸಿದೆ.
ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?
ಸೆಪ್ಟೆಂಬರ್ 12, 13 ಮತ್ತು 14ರಂದು ಕರಾವಳಿ ಕರ್ನಾಟಕಕ್ಕೆ ಯಾವುದೇ ಅಧಿಕೃತ ಮಳೆ ಎಚ್ಚರಿಕೆ ಇಲ್ಲ. ಕರಾವಳಿ ಕರ್ನಾಟಕದಲ್ಲಿ ಸ್ಥಳೀಯವಾಗಿ ಚದುರಿದ ಲಘು–ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.