ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತಷ್ಟು (Karnataka Weather) ಚುರುಕುಗೊಂಡಿದ್ದು, ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 24ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು (ಅಕ್ಟೋಬರ್ 21, 2026) ಒಣ ಹವಾಮಾನ ಮುಂದುವರಿಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಭಾರಿ ಮಳೆಯ ಮುನ್ಸೂಚನೆ ಇಲ್ಲ. ಅಕ್ಟೋಬರ್ 22 ರಿಂದ ಅಕ್ಟೋಬರ್ 24 ರ ಅವಧಿಯಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಂಭವಿಸಬಹುದು.
ಬರದ ಆತಂಕದ ನಡುವೆ ಹಾವೇರಿಗೆ ಮಳೆರಾಯನ ಸಿಂಚನ; ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದ ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಅಕ್ಟೋಬರ್ 24ರವರೆಗೆ ನಗರದಾದ್ಯಂತ ಚದುರಿದ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂದಿನ ಗರಿಷ್ಠ ತಾಪಮಾನ 28.4°C ಹಾಗೂ ಕನಿಷ್ಠ ತಾಪಮಾನ 20.4°C ಆಸುಪಾಸಿನಲ್ಲಿ ದಾಖಲಾಗಲಿದೆ. ಗಾಳಿಯಲ್ಲಿ ತೇವಾಂಶದ ಪ್ರಮಾಣ ಶೇಕಡಾ 79 ಕ್ಕಿಂತ ಹೆಚ್ಚಿರಲಿದ್ದು, ಚಳಿಯ ವಾತಾವರಣ ಇರಲಿದೆ.