ಬೆಂಗಳೂರು: ಮುಂಗಾರು ಮಳೆಯ ಕೊರತೆ ನಡುವೆ ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 28 ರಿಂದ ಜೂನ್ 30ರವರೆಗೆ (Karnataka Weather) ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಹಾಗೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ ಮತ್ತು ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹವಾಮಾನದಲ್ಲಿ ಸಣ್ಣ ಬದಲಾವಣೆಗಳು ಕಂಡುಬರಲಿವೆ. ಆರಂಭದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಸಂಪೂರ್ಣವಾಗಿ ಮೋಡ ಕವಿಯುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿಯ ವೇಳೆ ನಗರದ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ನಗರದ ಗರಿಷ್ಠ ಉಷ್ಣಾಂಶವು 31°C ಮತ್ತು ಕನಿಷ್ಠ ಉಷ್ಣಾಂಶವು 21°C ಆಸುಪಾಸಿನಲ್ಲಿರಲಿದೆ.