ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬಿರುಗಾಳಿ-ಗುಡುಗು ಮಳೆಯ ಅಲರ್ಟ್ ನೀಡಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು (Karnataka Weather) ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬಿರುಗಾಳಿ-ಗುಡುಗು ಮಳೆಯ ಅಲರ್ಟ್ ನೀಡಲಾಗಿದೆ. ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರೆಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ 24 ರಿಂದ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.ಜೂನ್ 22 ಹಾಗೂ 23 ರಂದು ದಕ್ಷಿಣ ಕನ್ನಡ , ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ , ಹಾವೇರಿ, ಹಾಸನ , ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 23 ಕ್ಕೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಮೋಡಗಳು ದಟ್ಟವಾಗಲಿವೆ, ಹಗುರ ಮಳೆಯಾಗುವ ಮುನ್ಸೂಚನೆ ಇದೆ. ನಗರದ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Bengaluru Rains: ಬೆಂಗಳೂರಿನಲ್ಲಿ ಮಳೆ ಆರ್ಭಟ; ಕೆರೆಗಳಂತಾದ ರಸ್ತೆಗಳು, ವೈಟ್‌ಫೀಲ್ಡ್‌ನಲ್ಲಿ ಮುಳುಗಿದ ವಾಹನಗಳು!
ಜೂನ್ 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.