ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವಡೆ ಮಂಗಳವಾರ ತುಂತುರು ಮಳೆಯಾಗಿದೆ. ಇನ್ನು ತೀವ್ರ ಬಿಸಿಲಿನ ನಡುವೆ ರಾಜ್ಯದಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 36°C ಮತ್ತು 24°C ಇರುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3°C ಹೆಚ್ಚಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 29ರಂದು ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಆಲಿಕಲ್ಲು ಮಳೆ ಅಥವಾ ಗುಡುಗು ಸಹಿತ ಮಳೆ ಆರ್ಭಟಿಸುವ ಸಾಧ್ಯತೆ ಇದೆ.
ಇನ್ನು ಏಪ್ರಿಲ್ 30ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬಾಗಲಕೋಟೆ, ಬೀದರ್ ಹೊರತುಪಡಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ 1ರಂದು ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Health Tips: ವ್ಯಾಯಾಮಕ್ಕೂ ಮುನ್ನ ಈ ಹಣ್ಣುಗಳ ಸೇವನೆ ಮಾಡಿದರೆ ಆರೋಗ್ಯಕ್ಕೆ ಉತ್ತಮ!
ಮೇ 2ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಸಾಧಾರಣ ಅಥವಾ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.