ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವರುಣನ ಆರ್ಭಟಕ್ಕೆ ಇಬ್ಬರು ಬಲಿ : ಇನ್ನೂ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಇಬ್ಬರು ಬಲಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಿ. ಬೆಂಚಮಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದೇವರಾಯನಗೌಡ ಪಾಟೀಲ (50) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಇಬ್ಬರು ಬಲಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 28, 2026 6:36 AM

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಇಬ್ಬರು ಬಲಿಯಾಗಿದ್ದು, ಅಪಾರ ಪ್ರಮಾಣದ (Karnataka Weather) ಆಸ್ತಿಪಾಸ್ತಿ ಹಾನಿಯಾಗಿದೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಿ. ಬೆಂಚಮಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದೇವರಾಯನಗೌಡ ಪಾಟೀಲ (50) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಅಡಿಕೆ ತೋಟದ ಮನೆಗೆ ಹಾಕಿದ್ದ ಹಂಚುಗಳು ಹಾರಿ ಹೋಗಿವೆ. ಇದನ್ನು ಕಂಡು ಗಾಬರಿಗೊಂಡ ಆರ್. ಲೋಕೇಶ (52) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆಯ ಹಳೆ ಕೆರೆ ಎಂಬಲ್ಲಿ ಸಿಡಿಲು ಬಡಿದು 8 ಕುರಿಗಳು ಹಾಗೂ 3 ಕುರಿಮರಿಗಳು ಮೃತಪಟ್ಟಿವೆ. ಗದಗ ಜಿಲ್ಲೆಯ ಮುಂಡರಗಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಖಾಸಗಿ ಕಂಪನಿಯ ಮೊಬೈಲ್ ಟವರ್ ಕಂಬ ಮುರಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾವಿರಾರು ಅಡಿಕೆ ಮರಗಳು ನೆಲಸಮವಾಗಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ ಹಾಗೂ ಬಿರುಗಾಳಿ ಸಂಭವಿಸಲಿದೆ. ವಿಶೇಷವಾಗಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಜನರು ತೀವ್ರ ಮುನ್ನೆಚ್ಚರಿಕೆ ವಹಿಸಬೇಕೆಂದು ಎಚ್ಚರಿಸಲಾಗಿದೆ.

ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ 28 ರಿಂದ 30 ರವರೆಗೆ ಮಳೆಯ ತೀವ್ರತೆ ಹೆಚ್ಚಿರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 29 ಮತ್ತು 30 ರಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದೇಶಾದ್ಯಂತ ಬಿಸಿ ಗಾಳಿ ಎಚ್ಚರಿಕೆ; ಹಲವು ರಾಜ್ಯಗಳಿಗೆ ಸೂಚನೆ ನೀಡಿದ ಹವಾಮಾನ ಇಲಾಖೆ

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಹೆಚ್ಚಿನ ಉಷ್ಣಾಂಶದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.