ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಾರುತಗಳ ಪ್ರಭಾವ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ (Karnataka Weather) ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ತಾಜಾ ಮಾಹಿತಿ ಪ್ರಕಾರ, ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ ರಾಜ್ಯದಾದ್ಯಂತ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಬಹುತೇಕ ಭಾಗಗಳಲ್ಲಿ ಮುಂಗಾರು ಸಕ್ರಿಯವಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸೆಪ್ಟೆಂಬರ್ 28 ರಿಂದ 30ರ ಅವಧಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಮಲೆನಾಡಿನ ಭಾಗಗಳಾದ ಆಗುಂಬೆ, ಕೊಟ್ಟಿಗೆಹಾರ, ಶೃಂಗೇರಿ ಹಾಗೂ ಭಾಗಮಂಡಲಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಳದಿ (ಯೆಲ್ಲೋ) ಅಲರ್ಟ್ ಮುನ್ಸೂಚನೆ ನೀಡಲಾಗಿದ್ದು, ನದಿ ತೀರ ಮತ್ತು ಗುಡ್ಡಗಾಡು ಪ್ರದೇಶಗಳ ನಿವಾಸಿಗಳಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸದ್ಯ ಹಗುರ ಮಳೆಯಾಗುತ್ತಿದೆ. ಆದರೆ, ಸೆಪ್ಟೆಂಬರ್ 28 ಮತ್ತು 29 ರಂದು ಈ ಭಾಗದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಸದ್ಯ ಒಣ ಹವೆ ಇದ್ದರೂ, ಸೆಪ್ಟೆಂಬರ್ 28 ರಿಂದ 29 ರ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
Vitamin C: ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31°C ಹಾಗೂ ಕನಿಷ್ಠ ತಾಪಮಾನ 21°C ದಾಖಲಾಗಿದೆ. ಪ್ರಸ್ತುತ ನಗರದಲ್ಲಿ ಶೇಕಡಾ 80 ರಷ್ಟು ಆರ್ದ್ರತೆ (Humidity) ಇದ್ದು, ಗಂಟೆಗೆ 5 ಮೈಲಿ ವೇಗದಲ್ಲಿ ವಾಯುವ್ಯ ದಿಕ್ಕಿನಿಂದ ತಂಗಾಳಿ ಬೀಸುತ್ತಿದೆ.ಇಂದು (ಸೆಪ್ಟೆಂಬರ್ 27) ನಗರದಾದ್ಯಂತ ಮುಖ್ಯವಾಗಿ ಬಿಸಿಲು ಮತ್ತು ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗಲಿನ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಆದರೆ, ನಾಳೆಯಿಂದ (ಸೆಪ್ಟೆಂಬರ್ 28) ಹವಾಮಾನದಲ್ಲಿ ಬದಲಾವಣೆಯಾಗಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.