ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಬೆಂಗಳೂರು ಸೇರಿ ಹಲವೆಡೆ ಬುಧವಾರ ಉತ್ತಮ ಮಳೆಯಾಗಿದ್ದು(Karnataka Weather), ಇಂದು (ಜು.23) ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚುರುಕುಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದ ಹೊರತುಪಡಿಸಿ ಉಳಿದ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆ ಅಬ್ಬರಿಸಲಿದೆ.
ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು, ವಿಜಯನಗರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ) ಸೇರಿ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ
ಇನ್ನು ಕರ್ನಾಟಕ ಕರಾವಳಿ ಹಾಗೂ ಅದರ ಹೊರಭಾಗದಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬಿರುಗಾಳಿ ಸಹಿತ ಹವಾಮಾನವಿರುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆ ಇದೆ.