ಬೆಂಗಳೂರು: ಕಳೆದ ಕೆಲವು ದಿನಗಳಿಂದ ತಗ್ಗಿರೋ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Karnataka Weather Report) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಳ್ಳಲಿದೆ. ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' (Yellow Alert) ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ ಸೇರಿದಂತೆ ಹಲವಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಕಂಡು ಬರಲಿದೆ. ನಗರದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮೇಲ್ಮೈ ಗಾಳಿ ಬೀಸಲಿದೆ ಎಂದು ತಿಳಿದುಬಂದಿದೆ.
ಹಿಮಾಚಲ ಪ್ರದೇಶದಲ್ಲಿ ಅಬ್ಬರಿಸಿದ ಮಳೆ-ಗಾಳಿ: ಒಂದೇ ತಿಂಗಳಲ್ಲಿ 157 ಮಂದಿ ಸಾವು, 260 ರಸ್ತೆ ಸಂಪರ್ಕ ಕಡಿತ
ಕರ್ನಾಟಕದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಕಬಿನಿ, ಹಾರಂಗಿ, ಆಲಮಟ್ಟಿ , ಹಿಡಕಲ್ ಜಲಾಶಯಗಳು ಬಹುತೇಕ ಭರ್ತಿಯಾಗಿದೆ. ಆಗಸ್ಟ್ 11, 2026ರ ಹೊತ್ತಿಗೆ ಕರ್ನಾಟಕದ ಒಟ್ಟಾರೆ ಜಲಾಶಯಗಳಲ್ಲಿ ನೀರಿನ ಸಂಗ್ರಹವು 373.869 ಟಿಎಂಸಿ ಇದೆ. ಒಟ್ಟು ಸಾಮರ್ಥ್ಯ 532.259 ಟಿಎಂಸಿ ಆಗಿದ್ದು, ಈ ಮೂಲಕ ಶೇಕಡಾ 70.24ರಷ್ಟು ನೀರು ಸಂಗ್ರವಾಗಿದೆ.