ಬೆಂಗಳೂರು: ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಜುಲೈ 22 ರಂದು ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 23ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆ ಮುಂದುವರಿಯಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.