ಬೆಂಗಳೂರು: ರಾಜ್ಯದ ಹಲವೆಡೆ ಸೋಮವಾರ ಭಾರೀ ಮಳೆಯಾಗಿದೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ (Karnataka Weather) ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದ್ದು, ಗಂಟೆಗೆ 40-50 ಕಿ.ಮೀ. ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ನೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಮೈಸೂರಿನಲ್ಲಿ ಮಳೆ ಮನ್ಸೂಚನೆಯನ್ನು ನೀಡಲಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.
ಮಳೆಗೆ ಬೆಂಗಳೂರು ತತ್ತರ
ನಿನ್ನೆ ನಗರದ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ನದಿಯಂತಾಗಿದ್ದವು. ಬೆಂಗಳೂರಿನ ವಸಂತನಗರ, ಸಿಟಿ ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾ ನಗರ, ಲಗ್ಗೆರೆ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ಸುಬ್ರಮಣ್ಯ ನಗರ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ, ಮಲ್ಲೇಶ್ವರಂ, ಮೆಜೆಸ್ಟಿಕ್, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗಿದೆ.