ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಮೂರು ದಿನ (Karnataka Weather) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮೇ 26ರಿಂದ ಕೇರಳಕ್ಕೆ ಮುಂಗಾರು ಎಂಟ್ರಿ
ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಒಂದು ವಾರ ಮುಂಚಿತವಾಗಿಯೇ ಅಂದರೆ ಮೇ 26 ರಂದೇ ಕೇರಳವನ್ನು ಪ್ರವೇಶಿಸಲಿದೆ ಎಂದು ಐಎಂಡಿ ತಿಳಿಸಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿರುವ ಮುಂಗಾರು, ಅಲ್ಲಿಂದ ವೇಗವಾಗಿ ಭಾರತದ ಪ್ರಧಾನ ಭೂಭಾಗದತ್ತ ಮುನ್ನಡೆಯುತ್ತಿದೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದ ಕೇವಲ ಒಂದು ವಾರದಲ್ಲಿ, ಅಂದರೆ ಜೂನ್ ಮೊದಲ ವಾರದಲ್ಲೇ ಕರ್ನಾಟಕಕ್ಕೂ ಮುಂಗಾರು ಪ್ರವೇಶಿಸಲಿದೆ.
Mangaluru Rains: ಹವಾಮಾನ ವೈಪರೀತ್ಯ; ಮಂಗಳೂರಿನಲ್ಲಿ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು!
ಈ ವರ್ಷ ದೇಶದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೆಸಿಫಿಕ್ ಮಹಾಸಾಗರದಲ್ಲಿ ರೂಪುಗೊಳ್ಳುತ್ತಿರುವ ಎಲ್ ನಿನೊ ಪರಿಣಾಮದಿಂದ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.