ರಾಜ್ಯಾದ್ಯಂತ ಮುಂದಿನ 5 ದಿನ ವ್ಯಾಪಕ ಮಳೆ ಮುನ್ಸೂಚನೆ, 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿಯ ತೀವ್ರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಹವಾಮಾನದಲ್ಲಿ ಭಾರಿ ಏರುಪೇರಾಗಿದ್ದು, ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಕ್ಟೋಬರ್ 11ರವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿಯ ತೀವ್ರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಹವಾಮಾನದಲ್ಲಿ ಭಾರಿ ಏರುಪೇರಾಗಿದ್ದು, ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಕ್ಟೋಬರ್ 11ರವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ, ಉಡುಪಿ, ದಕ್ಷಿಣ ಕನ್ನಡ, ಹಾಗೂ ಉತ್ತರ ಕನ್ನಡ ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಅಕ್ಟೋಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಮುಖ್ಯವಾಗಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿ ಕರ್ನಾಟಕದ ಹಲವು ಕಡೆ, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ.
ರಾತ್ರಿ ಇಡೀ ಸುರಿದ ಮಳೆ
ಬೆಂಗಳೂರಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಪರದಾಡಿದ್ದಾರೆ. ನಗರದ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊರೇಷನ್, ಕೆ.ಆರ್. ಮಾರ್ಕೆಟ್, ಶಾಂತಿನಗರ ಹಾಗೂ ಆನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಜಿಗಣಿ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದೆ. ಪ್ರಮುಖವಾಗಿ ಕೆ.ಆರ್. ಮಾರ್ಕೆಟ್ ಪ್ರದೇಶದ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿದಿದೆ.